ಮೈಸೂರು(Mysuru): ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಶೇ 100 ಫಲಿತಾಂಶ ಸಾಧಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಗುರಿಯನ್ನು ಹಾಕಿಕೊಳ್ಳಲಾಗಿದ್ದು, ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ಹೇಳಿದರು.
ಸದ್ವಿದ್ಯಾ ಪ್ರೌಢಶಾಲೆಯಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಗಳವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ಹಾಗೂ ಸಿಬ್ಬಂದಿ ಫಲಿತಾಂಶ ಉತ್ತಮ ಪಡಿಸಲು ಗುಣಮಟ್ಟದ ಕಲಿಕೆಯನ್ನು ನೀಡಬೇಕು. ಸದ್ವಿದ್ಯಾ ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುತ್ತಿದೆ. ಪ್ರತಿಭಾನ್ವಿತರಿಗೆ ಪುರಸ್ಕಾರ ನೀಡುವುದರಿಂದ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪ್ರೋತ್ಸಾಹಿಸಿದಂತಾಗುತ್ತದೆ ಎಂದರು.
2021–22ನೇ ಸಾಲಿನಲ್ಲಿ 625ಕ್ಕೆ 625 ಅಂಕ ಗಳಿಸಿದ ಬಿ.ಎಸ್.ಆದಿತಿ, ಎಂ.ಯಶಸ್ವಿ ಅರಸ್ ಹಾಗೂ ಎಂ.ಇಂಚರಾ ಅವರಿಗೆ ಪ್ರತಿಭಾ ಪುರಸ್ಕಾರ ಹಾಗೂ ಬೆಳ್ಳಿ ಫಲಕ ನೀಡಿ ಸನ್ಮಾನಿಸಲಾಯಿತು.
ಶೇ 90ಕ್ಕಿಂತ ಹೆಚ್ಚು ಅಂಕಗಳಿಸಿದ 143 ವಿದ್ಯಾರ್ಥಿಗಳೂ ಪುರಸ್ಕಾರ ಪಡೆದರು.
ಸಂಸ್ಥೆ ಅಧ್ಯಕ್ಷ ಪ್ರೊ.ವಿ.ಕೆ.ಗೋಪಾಲಾಚಾರ್, ಉಪಾಧ್ಯಕ್ಷ ಸಿ.ಆರ್.ನಾಗರಾಜ್, ಕಾರ್ಯದರ್ಶಿ ಪ್ರೊ.ಎಂಎಸ್ಕೆ ನರಹರಿಬಾಬು, ಸಹ ಕಾರ್ಯದರ್ಶಿ ಪ್ರೊ.ಕೆ.ಎಸ್.ಹಿರಿಯಣ್ಣ, ಮುಖ್ಯಶಿಕ್ಷಕ ರಾಮಚಂದ್ರ ಭಟ್ ಇದ್ದರು.















