ಮನೆ ರಾಜಕೀಯ ಚರ್ಮಗಂಟು ರೋಗ ನಿರ್ವಹಣೆಗೆ 13 ಕೋಟಿ ಬಿಡುಗಡೆ: ಸಿಎಂ ಬೊಮ್ಮಾಯಿ ಸೂಚನೆ

ಚರ್ಮಗಂಟು ರೋಗ ನಿರ್ವಹಣೆಗೆ 13 ಕೋಟಿ ಬಿಡುಗಡೆ: ಸಿಎಂ ಬೊಮ್ಮಾಯಿ ಸೂಚನೆ

0

ಬೆಂಗಳೂರು(Bengaluru): ರಾಜ್ಯದಲ್ಲಿ ಹರಡುತ್ತಿರುವ ಜಾನುವಾರುಗಳ ಚರ್ಮಗಂಟು ರೋಗ ನಿವಾರಣೆಗೆ ಲಸಿಕೆ, ಚಿಕಿತ್ಸೆ ನೀಡಲು ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ₹ 13 ಕೋಟಿ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೃತ ರಾಸುಗಳ ಪರಿಹಾರಕ್ಕೆ ಈಗಾಗಲೇ ₹ 2 ಕೋಟಿ ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ ₹ 5 ಕೋಟಿ ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ 8 ಕೋಟಿ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚಿಸಿದರು.

ರಾಜ್ಯದ 28 ಜಿಲ್ಲೆಗಳ 160 ತಾಲ್ಲೂಕುಗಳ 4380 ಗ್ರಾಮಗಳಲ್ಲಿ ಕಾಣಿಸಿಕೊಂಡಿವೆ. 45,645 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. 2070 ಜಾನುವಾರುಗಳು ಮರಣ ಹೊಂದಿವೆ.

6.57 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು ಎಂದು ಅಧಿಕಾರಿಗಳು ತಿಳಿಸಿದರು.

ಈ ಹಿನ್ನೆಲೆಯಲ್ಲಿ ರೋಗ ತೀವ್ರವಾಗಿರುವ ಜಿಲ್ಲೆಗಳಲ್ಲಿ ಆದ್ಯತೆಯ ಮೇರೆಗೆ ಲಸಿಕೆಯನ್ನು ಹಾಕಲು ಸೂಚಿಸಿದರಲ್ಲದೆ, ಕೂಡಲೇ 15 ಲಕ್ಷ ಡೋಸ್ ಲಸಿಕೆಗಳನ್ನು ಒದಗಿಸುವಂತೆ ತಿಳಿಸಿದರು.

ಲಸಿಕೆ ಪೂರೈಕೆ ಕುರಿತು ಭಾರತ ಸರ್ಕಾರ ಅನುಮೋದಿಸಿದ ಕಂಪೆನಿಗಳೊಂದಿಗೆ ಮಾತುಕತೆ ನಡೆಸಿ, ಲಸಿಕೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಿದರು.

ರೋಗಪೀಡಿತ ಜಾನುವಾರುಗಳನ್ನು ಪ್ರತ್ಯೇಕಿಸಲು ಪ್ರತಿ ಗ್ರಾಮದಲ್ಲಿ ವ್ಯವಸ್ಥೆ ಮಾಡಬೇಕು. ಮರಣ ಹೊಂದಿದ ಜಾನುವಾರುಗಳಿಗೆ ₹ 2 ಕೋಟಿ ನೀಡಲಾಗಿದ್ದು, 46.15 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಬಾಕಿ ಪರಿಹಾರ ತ್ವರಿತವಾಗಿ ವಿತರಿಸುವಂತೆ ಸೂಚಿಸಲಾಯಿತು.