ವಿಜಯಪುರ (Vijayapura): ವಾಯವ್ಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ಮತದಾರರಿಗೆ ಹಂಚಲು ಕಾರಿನಲ್ಲಿ ಕೊಂಡೊಯ್ಯತ್ತಿದ್ದ ₹ 17.40 ಲಕ್ಷ ನಗದನ್ನು ಚುನಾವಣಾಧಿಕಾರಿಗಳು ಭಾನುವಾರ ಸಂಜೆ ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ವಶಪಡಿಸಿಕೊಂಡಿದ್ದಾರೆ.
ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರ ಬೆಂಬಲಿಗ ಬಾಬಸಾಹೇಬ ಖೋತ್ ಸೇರಿದಂತೆ ಆರು ಜನರು ಸಿಕ್ಕಿ ಬಿದ್ದಿದ್ದಾರೆ.
ಚುನಾವಣಾಧಿಕಾರಿ ಎ.ಎಸ್.ಕೊಲ್ಹಾರ ಈ ಕುರಿತು ಮಾಹಿತಿ ನೀಡಿದ್ದು, ಮಹಾರಾಷ್ಟ್ರ ನೋಂದಣಿ ಹೊಂದಿರುವ ಕಾರಿನಲ್ಲಿ ₹ 10 ಸಾವಿರದಂತೆ 174 ಪಾಕೇಟ್‌ಗಳಲ್ಲಿ ಹಣದ ಜೊತೆಗೆ ಪ್ರಕಾಶ ಹುಕ್ಕೇರಿ ಅವರ ಬ್ಯಾಲೆಟ್ ಪೇಪರ್ ಮಾದರಿ ಕರಪತ್ರವನ್ನು ಇರಿಸಿ, ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿರುವಾಗ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸೂಕ್ತ ಕ್ರಮಕ್ಕೆ ಆಗ್ರಹ: ವಾಯವ್ಯ ಶಿಕ್ಷಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಪೂರ, ಬಿಜೆಪಿ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಮತ್ತಿತರರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿ ಮಾಡಿ, ಹಣ ಹಂಚುವ ಮೂಲಕ ಚುನಾವಣಾ ಅಕ್ರಮ ಎಸಗಿರುವ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ.
ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರ ಮೇಲೆ ‘ಪ್ರಜಾಪ್ರತಿನಿಧಿ ಕಾಯ್ದೆ’ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಈ ಪರಿಷತ್ ಚುನಾವಣೆಯಿಂದ ಅವರನ್ನು ವಜಾಗೊಳಿಸಬೇಕೆಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.