ಮನೆ ರಾಜ್ಯ ಟಿ.ನರಸೀಪುರ ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

ಟಿ.ನರಸೀಪುರ ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

0

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.

Join Our Whatsapp Group

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 10 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಟ್ವೀಟ್​ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಕೊಳ್ಳೆಗಾಲದಿಂದ ಬರುತ್ತಿರುವಾಗ ಖಾಸಗಿ ಬಸ್‌ ಗೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ. ಡಿಸಿ ಮತ್ತು ಮಹದೇವಪ್ಪನ ಬಳಿ ಮಾತನಾಡಿದ್ದೇನೆ ಸ್ಥಳಕ್ಕೆ ಭೇಟಿ ನೀಡಿ ಎಂದು ಸೂಚಿಸಿದ್ದೇನೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ  ಭೀಕರ ಅಪಘಾತ ಸಂಭವಿಸಿದೆ.  ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದ್ದು,  ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರು ಪೈಕಿ ಕೆಲವರು ಬಳ್ಳಾರಿ ಸಂಗನಕಲ್ ನಿವಾಸಿಗಳಾಗಿದ್ದಾರೆ. ಇವರು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಮೃತರಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳಾಗಿದ್ದಾರೆ. 16 ಮಂದಿ ಗಾಯಾಳುಗಳಿಗೆ ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಮೃತಪಟ್ಟವರು ಯಾರೆಲ್ಲ?

ಬಿಳ್ಯಾಳ ಮಂಜುನಾಥ್ (35), ಇವರ ಪತ್ನಿ ಪೂರ್ಣಿಮಾ (30), ಮಗ ಪವನ (10), ಕಾರ್ತಿಕ (08), ಸಂದೀಪ (24), ತಾಯಿ ಸುಜಾತ ( 40), ತಂದೆ ಕೊಟ್ರೇಶ್ (45), ಪತ್ನಿ ಗಾಯತ್ರಿ (35), ಮಗಳು ಶ್ರಾವ್ಯ ( 03) ಹಾಗೂ ಇನೋವಾ ಚಾಲಕ ಮೈಸೂರಿನ ಆದಿತ್ಯ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರಗೆ ರವಾನಿಸಲು ಸಿದ್ಧತೆ ಮಾಡಲಾಗುತ್ತಿದೆ. ಸದ್ಯ ಚಾಮರಾಜನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಎಸ್.ಎಸ್.ಎಲ್.ಸಿ ಯಲ್ಲಿ ಜಿಲ್ಲೆಯ 32 ಸರ್ಕಾರಿ ಶಾಲೆಗಳಿಗೆ ಶೇ.100 ರಷ್ಟು ಫಲಿತಾಂಶ:  ಡಾ. ಕೆ ವಿ ರಾಜೇಂದ್ರ
ಮುಂದಿನ ಲೇಖನಹಾಸ್ಯ