ಬೆಂಗಳೂರು: ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆ ಪುನಃಶ್ಚೇತನಕ್ಕೆ ₹20 ಕೋಟಿ ರೂ. ಬಿಡುಗಡೆ ಮಾಡುವಂತೆ ವಿಧಾನಪರಿಷತ್ತಿನ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಮೈಸೂರು ಸಕ್ಕರೆ ಕಾರ್ಖಾನೆಗೆ ₹50 ಕೋಟಿ ನೀಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಈವರೆಗೆ ₹30 ಕೋಟಿ ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ 1ರಿಂದಲೇ ಕಾರ್ಖಾನೆ ಕಾರ್ಯಾರಂಭ ಮಾಡಿದೆ. ಪ್ರತಿದಿನ 300-400 ಟನ್ ಕಬ್ಬು ಅರೆಯುವಿಕೆಯಿಂದ ಪ್ರಾರಂಭವಾಗಿ ಪ್ರಸ್ತುತ ಸುಮಾರು 1500-1600 ಟನ್ ಕಬ್ಬನ್ನು ಅರೆಯಲಾಗುತ್ತಿದೆ.
ಮೈಸೂರು ಸಕ್ಕರೆ ಕಾರ್ಖಾನೆಗೆ ರೈತರು ಸುಮಾರು 3 ಲಕ್ಷ ಟನ್ ಕಬ್ಬನ್ನು ಸರಬರಾಜು ಮಾಡಲು ಒಪ್ಪಿಗೆ ಕರಾರಾಗಿರುತ್ತದೆ. ಕಾರ್ಖಾನೆಯ ಆರ್ಥಿಕ ಸ್ಥಿತಿ ಉತ್ತಮವಾಗಿರದೇ ಇರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.