ಮನೆ ರಾಜಕೀಯ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಡಿ.ಕೆ. ಶಿವಕುಮಾರ್ ಘೋಷಣೆ

ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಡಿ.ಕೆ. ಶಿವಕುಮಾರ್ ಘೋಷಣೆ

0

ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ.

ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ ಇಂತಹ ಪವಿತ್ರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

1924 ರಂದು ಬೆಳಗಾವಿಯಲ್ಲಿ ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು. ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆಗೆ ನಾಂದಿ ಹಾಡಿದ್ದೇವೆ ಎಂದರು.

ನಿಮ್ಮ ಮನೆಯಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದು. ಮಹಿಳೆಯರು, ಯುವಕರು, ರೈತರು 200 ಯುನಿಟ್’ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ನಡೆಯುತ್ತೇವೆ. ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಅಡುಗೆ ಅನಿಲದ ಬೆಲೆ 400 ರಿಂದ 1100 ರು. ಆಗಿದೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮೋದಿ ಸರ್ಕಾರ ವಚನ ನೀಡಿತ್ತು. ಯಾರಾದರೂ ರೈತನ ಆದಾಯ ಡಬಲ್ ಆಗಿದೆಯಾ? ಕಳೆದ ಚುನಾವಣೆ ಸಮಯದಲ್ಲಿ ನಿಮ್ಮ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದರು. ಸಾಲ ಮನ್ನಾ ಆಗಿದೆಯಾ? 10 ಹೆಚ್ ಪಿ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದರು. ನೀಡಿದರಾ? ಬಂಗಾರಪ್ಪ ಅವರ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಲು ಆರಂಭಿಸಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನು ಇಂಧಾನ ಸಚಿವನಾಗಿದ್ದಾಗ ರೈತರಿಗೆ ವಿದ್ಯುತ್ ನೀಡುವ ಸಮಯವನ್ನು 6 ರಿಂದ 7 ಗಂಟೆಗೆ ಹೆಚ್ಚಿಸಿದೆವು ಎಂದು ತಿಳಿಸಿದರು.

ಈ ಸರ್ಕಾರ ಬಿ ರಿಪೋರ್ಟ್ ಸರ್ಕಾರ. ಮಂತ್ರಿಗಳು ಯಾವುದೇ ಪ್ರಕರಣದಲ್ಲಿ ಸಿಕ್ಕಿಬಿದ್ದರೂ ಅವರಿಗೆ ಬಿ ರಿಪೋರ್ಟ್ ಕೊಟ್ಟು, ಅವರು ಯಾವುದೇ ತಪ್ಪು ಕೆಲಸ ಮಾಡಿಲ್ಲ, ನಿರ್ದೇಷಿಯಾಗುತ್ತಾರೆ ಎಂದು ಮುಖ್ಯಮಂತ್ರಿಗಳು, ಗೃಹ ಸಚಿವರು ಸಂದೇಶ ನೀಡುತ್ತಾರೆ. ಈ ಸರ್ಕಾರ ಬೇಕಾ ಎಂದು ನೀವು ಆಲೋಚಿಸಿ.

ಈ 40% ಕಮಿಷನ್ ಸರ್ಕಾರ ಈ ರಾಜ್ಯದಲ್ಲಿ ಕೋಮು ದ್ವೇಷದ ವಿಷ ಬೀಜವನ್ನು ಜನರ ಮನಸ್ಸಿನಲ್ಲಿ ಬಿತ್ತುತ್ತಿದ್ದಾರೆ. ಈ ಸರ್ಕಾರ ಹೊಟೇಲಿನಲ್ಲಿ ಮೆನು ಕಾರ್ಡ್ ಮಾದರಿಯಲ್ಲಿ ಭ್ರಷ್ಟಾಚಾರದ ರೇಟ್ ಕಾರ್ಡ್ ಹಾಕಿದ್ದಾರೆ. ಇದನ್ನು ಪತ್ರಿಕೆಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ, ಮಂತ್ರಿ ಹುದ್ದೆಗೆ 100 ಕೋಟಿ, ಆಯುಕ್ತರಿಗೆ 15 ಕೋಟಿ, ಕೋವಿಡ್ ಪೂರೈಕೆಗೆ ಶೇ.75, ಪಿಡಬ್ಲ್ಯೂ ಕಾಮಗಾರಿಗೆ 40%, ಮಠಗಳ ಅನುದಾನಕ್ಕೆ 40%, ಮೊಟ್ಟೆ ಪೂರೈಕೆಗೆ 30% ಕಮಿಷನ್ ನಿಗದಿ ಮಾಡಿದ್ದಾರೆ. ಈ ಬಗ್ಗೆ 2 ಲಕ್ಷ ಸದಸ್ಯರಿರುವ ಗುತ್ತಿಗೆದಾರರ ಸಂಘದವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದು ನಿಜವಲ್ಲವೇ? ಆದರೂ ಸರ್ಕಾರ ದುಡ್ಡು ಕೊಡಲು ನಿರಾಕರಿಸಿದ್ದು ನಿಜವಲ್ಲವೇ? ಕಾಂಗ್ರೆಸ್ ನಾಯಕರು ಅವರ ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದೆವು. ಈವರೆಗೂ ಆ ಕುಟುಂಬಕ್ಕೆ ಸರ್ಕಾರ ಬಿಲ್ ಪಾವತಿ ಮಾಡಿಲ್ಲ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿಯ ಪಾಪದ ಕೊಡ ತುಂಬಿದೆ. ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹೊಸ ವಚನಗಳ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಾ, ಸುಳ್ಳು ಹೇಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಮಸ್ಯೆಗೆ ಪರಿಹಾರ ನೀಡದೇ, ಜನರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲು ಆಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ನಾವು ಕೊಟ್ಟಿದ್ದ 165 ಭರವಸೆಗಳ ಪೈಕಿ 159 ಭರವಸೆ ಈಡೇರಿಸಿದ್ದೇವೆ ಎಂದರು.