ಮೈಸೂರು(Mysuru): ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಾಕಷ್ಟು ಮುನ್ನಡೆ ಸಾಧಿಸುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಐಎಸ್‍ಎಂಸಿ 23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರಕಟಿಸಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬದ ಪ್ರಯುಕ್ತ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಮೈಸೂರು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿಯಾಗಿ ಏರ್ಪಡಿಸಿದ್ದ ಕೈಗಾರಿಕಾ ದಸರಾ ಉದ್ಘಾಟಿಸಿ ಅವರು ಮಾತನಾಡಿದರು.
ಐಎಸ್‍ಎಂಸಿ ಕಂಪನಿಯು ಸುಮಾರು 23 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದ್ದು, ಸೆಮಿಕಂಡಕ್ಟರ್ ಪ್ಯಾಬ್ ಸ್ಥಾಪಿಸಲು ರಾಜ್ಯಸರ್ಕಾರೊಂದಿಗೆ ಎಂಒಯುಗೆ ಸಹಿ ಹಾಕಿದೆ. ಇದರಿಂದ ಈ ಭಾಗದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಸಾಕಷ್ಟು ಕೈಗಾರಿಕೆಗಳು ಸ್ಥಾಪನೆಯಾಗಿರುವುದರಿಂದ ನಮ್ಮ ಸರ್ಕಾರ 2 ಮತ್ತು 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚು ಒತ್ತು ಕೊಡುತ್ತಿದೆ. ಮೈಸೂರು ಕೂಡ ನಮ್ಮ ಆದ್ಯತೆಯ ನಗರಗಳಲ್ಲಿ ಒಂದಾಗಿದೆ ಎಂದು ನಿರಾಣಿ ಹೇಳಿದರು.
ನವೆಂಬರ್ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಇದಕ್ಕಾಗಿ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.ಇತ್ತೀಚೆಗೆ ದಾವೋಸ್, ಅಮೇರಿಕಾ ಹಾಗೂ ಜಪಾನ್‍ಗೆ ಭೇಟಿ ನೀಡಿದ ವೇಳೆ ವಿಶ್ವದ ಮುಂಚೂಣಿಯಲ್ಲಿರುವ ಉದ್ಯಮಿಗಳನ್ನು ಭೇಟಿಯಾಗಿ ರಾಜ್ಯದಲ್ಲಿ ಬಂಡವಾಳ ಹೂಡಲು ಆಹ್ವಾನ ನೀಡಿದ್ದೇವೆ, ಅನೇಕರು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.
ಈ ಬಾರಿಯ ಹೂಡಿಕೆದಾರರ ಸಮಾವೇಶದಲ್ಲಿ ನಮಗೆ ಅಂದಾಜು 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗಿ 10 ಲಕ್ಷ ಹುದ್ದೆಗಳು ಸೃಷ್ಟಿಯಾಗುವ ವಿಶ್ವಾಸವಿದೇ ಎಂದು ತಿಳಿಸಿದರು.
ವಿಶ್ವದಲ್ಲೇ ಕೈಗಾರಿಕೆಗೆ ಹೊಸ ಮಾನ್ಯತೆ ತಂದುಕೊಟ್ಟ ನಾಲ್ವಡಿ ಕೃಷ್ಣರಾಜ ಒಡೆಯರ್ ನನಗೆ ಎಂದೆಂದಿಗೂ ಆದರ್ಶಪ್ರಾಯರು. ಈ ಸಂಸ್ಥಾನದಲಿ ದಿವಾನರಾಗಿದ್ದ ಸರ್ ಎಂ.ವಿಶ್ವೇಶ್ವರಯ್ಯನವರು ಕೂಡ ನನಗೆ ಪ್ರಾರ್ಥಸ್ಮರಣೀಯರು ಎಂದು ನಿರಾಣಿ ಅವರು ಸ್ಮರಿಸಿದರು.
ಶತಮಾನಗಳ ಹಿಂದೆ ಕೈಗಾರಿಕೆಗಳ ಸ್ಥಾಪನೆಗೆ ಮುನ್ನುಡಿ ಬರೆದ ಮೊದಲ ಮಹರಾಜರಾಜರೆಂದರೆ ನಾಲ್ವಡಿ ಕೃಷ್ಣರಾಜ ಒಡೆಯರ್. ಕರ್ನಾಟಕ ಇಂದು ಕೈಗಾರಿಕೆ, ಶಿಕ್ಷಣ, ಆರೋಗ್ಯ ನೀರಾವರಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಇಷ್ಟು ಸಾಧನೆ ಮಾಡಿದೆ ಎಂದರೆ ಅದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣ ಎಂದು ಮುಕ್ತ ಕಂಠದಿಂದ ಹೊಗಳಿದರು.
ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ನಮ್ಮ ಶಿಕ್ಷಣ ಸಂಸ್ಥೆ ಸೇರಿದಂತೆ ಮತ್ತಿತರ ಕಡೆ ಕಡ್ಡಾಯವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ವಿಶ್ವೇಶ್ವರಯ್ಯನವರ ಪ್ರತಿಮೆಗಳನ್ನ ಸ್ಥಾಪನೆ ಮಾಡಿ ಅವರ ಅದರ್ಶಗಳನ್ನು ಅನುಸರಿಸುತ್ತಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಸೋಮಶೇಖರ್, ಶಾಸಕರಾದ ಹರ್ಷವರ್ಧನ, ಎಲ್.ನಾಗೇಂದ್ರ, ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಬಗಾದಿ ಗೌತಮ್ ಮತ್ತಿತರರು ಉಪಸ್ಥಿತರಿದ್ದರು.