ಬೆಂಗಳೂರು(Bengaluru): ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ಘಟನೆ ಕುರಿತು ಮಾಹಿತಿ ನೀಡಿದ್ದು, ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಸ್ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ತಡರಾತ್ರಿ 1.30ರ ಸುಮಾರಿಗೆ ಕೆಂಗೇರಿಯ ಭಾರತ್ ಪೆಟ್ರೋಲಿಯಂ ಬಳಿ ಅಪಘಾತ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.