ಮನೆ ರಾಜ್ಯ ರಾಜ್ಯದ 1,275 ಹೊಸ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಗದಗ 48 ತಾಣಗಳು ಆಯ್ಕೆ..!

ರಾಜ್ಯದ 1,275 ಹೊಸ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಗದಗ 48 ತಾಣಗಳು ಆಯ್ಕೆ..!

0

ಗದಗ : ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ ಅಡಿಯಲ್ಲಿ ರಾಜ್ಯಾದ್ಯಂತ ಒಟ್ಟು 1,275 ಹೊಸ ಪ್ರವಾಸಿ ತಾಣಗಳನ್ನು ಗುರುತಿಸಿದೆ. ಅದರಲ್ಲಿ ಗದಗ ಜಿಲ್ಲೆಯ 48 ತಾಣಗಳು ಮಹತ್ವದ ಸ್ಥಾನ ಪಡೆಕೊಂಡಿವೆ.

ಸಂಗೀತ, ಸಾಹಿತ್ಯ, ಕಲೆಗಳ ತವರೂರಾಗಿರುವ ಗದಗ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ಪ್ರವಾಸೋದ್ಯಮ ತಾಣವಾಗಿಯೂ ಗಮನ ಸೆಳೆಯುತ್ತಿದೆ. ಇದೀಗ ರಾಜ್ಯ ಸರ್ಕಾರ ಗುರುತು ಮಾಡಿರುವ 1,275 ಹೊಸ ಪ್ರವಾಸಿ ತಾಣಗಳ ಪೈಕಿ ಗದಗ-ಬೆಟಗೇರಿ ಅವಳಿ ನಗರದಲ್ಲಿರುವ ವೀರೇಶ್ವರ ಪುಣ್ಯಾಶ್ರಮ, ವೀರಗಲ್ಲು, ಸಬರಮತಿ ಆಶ್ರಮದ ಪ್ರತಿರೂಪ ಸೇರಿದಂತೆ ಒಟ್ಟು 45 ತಾಣಗಳು ಸೇರಿಕೊಂಡಿವೆ.

ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಅಂಕಿ ಅಂಶಗಳನ್ನು ಆಧರಿಸಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿಯಿಂದ ಸ್ವೀಕರಿಸಿದ ಆಧಾರದ ಮೇಲೆ ಹೊಸ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮುಹಮ್ಮದ್ ಇಬ್ರಾಹಿಂ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಹೊಸದಾಗಿ ಗುರುತಿಸಲಾದ ತಾಣಗಳ ಅಭಿವೃದ್ಧಿಗೆ ಅಗತ್ಯವಾದ ಕ್ರಿಯಾ ಯೋಜನೆಗಳು ಮತ್ತು ಅಂದಾಜು ವೆಚ್ಚಗಳನ್ನು ಸಿದ್ಧಪಡಿಸಿ, ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮೋದನೆ ಪಡೆದ ನಂತರ ಕಾಮಗಾರಿಗಳನ್ನು ಆರಂಭಿಸಲು ಸೂಚಿಸಲಾಗಿದೆ. ಹೊಸ ಪ್ರವಾಸಿ ತಾಣಗಳ ಗುರುತಿಸುವಿಕೆಯಿಂದಾಗಿ ಪ್ರವಾಸಿ ತಾಣಗಳ ಮೂಲಸೌಕರ್ಯ ಅಭಿವೃದ್ಧಿಯ ನಿರೀಕ್ಷೆ ಗರಿಗೆದರಿದೆ. ವಿಶೇಷವಾಗಿ ರಾಜ್ಯ ಪುರಾತತ್ವ ಇಲಾಖೆ ಅಧೀನದಲ್ಲಿರುವ ಮತ್ತು ನಿರ್ಲಕ್ಷ್ಯಕ್ಕೆ ಒಳಗಾಗಿರುವ ಅನೇಕ ಧಾರ್ಮಿಕ ತಾಣಗಳು, ಐತಿಹಾಸಿಕ ದೇವಸ್ಥಾನಗಳು ಅಭಿವೃದ್ಧಿ ಕಂಡು ಪ್ರವಾಸಿಗರನ್ನು ಆಕರ್ಷಿಸಲಿವೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ವಿಶೇಷ ಪ್ರಯತ್ನದಿಂದ ನೂತನ ಪ್ರವಾಸೋದ್ಯಮ ನೀತಿಯಡಿ ಗುರುತಿಸಲಾದ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಗದಗ ಜಿಲ್ಲೆಯ 48 ತಾಣಗಳು ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ. ರಾಜ್ಯದ ಪ್ರವಾಸೋದ್ಯಮಕ್ಕೆ ಹೊಸ ರೂಪ ಕೊಡುವ ಉದ್ದೇಶದಿಂದ ನೂತನ ಪ್ರವಾಸೋದ್ಯಮ ನೀತಿಯಡಿ ರಾಜ್ಯದ 1,275 ತಾಣಗಳನ್ನು ಗುರುತಿಸಲಾಗಿದ್ದು, ಅವುಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.