ಬೆಳಗಾವಿ: ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ರೂ.2,500 ಕೋಟಿ ಅನುದಾನ ಅಗತ್ಯವಿರುತ್ತದೆ.ಅದಕ್ಕಾಗಿ ಎಡಿಬಿ ಬ್ಯಾಂಕ್ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತಲಾ 2 ಅಥವಾ 3 ಶಾಲೆಗಳನ್ನು ನೀಡಲು ಉದ್ದೇಶಿಸಲಾಗಿದೆ. ಗ್ರಾಮ ಮಟ್ಟದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಇದು ಪ್ರಮುಖ ಹೆಜ್ಜೆಯಾಗಲಿದೆ. ಮೂರು ವರ್ಷಗಳಲ್ಲಿ 13,500 ಪ್ರಾಥಮಿಕ ಶಾಲೆ ಶಿಕ್ಷಕರ ನೇಮಕಾತಿಯಾಗಿದ್ದು, ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು.
ಚುನಾವಣೆಯೂ ಸೇರಿದಂತೆ ಬೇರೆ ಯಾವುದೇ ಚಟುವಟಿಕೆಗೆ ಸರ್ಕಾರಿ ಶಾಲೆ ಶಿಕ್ಷಕರನ್ನು ನಿಯೋಜನೆ ಮಾಡಬಾರದು ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡಿದ್ದೇನೆ ಎಂದು ತಿಳಿಸಿದರು.ದ್ವಿಭಾಷಾ ನೀತಿಗೆ ಸಂಬಂಧಿಸಿದಂತೆ ನಾನೊಬ್ಬನೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಮಕ್ಕಳ ಹಿತದೃಷ್ಟಿಯಿಂದ ಏನು ಬೇಕೋ ಅದನ್ನು ಮಾಡುತ್ತೇವೆ ಎಂದರು.
1995ರ ನಂತರದ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು ಚರ್ಚೆ ನಡೆಯುತ್ತಿದೆ. ಹಣಕಾಸು ಇಲಾಖೆಗೂ ಪ್ರಸ್ತಾವ ಸಲ್ಲಿಸಿದ್ದೇವೆ. ಈ ಹಿಂದೆ 2016ರವರೆಗಿನ ಶಾಲೆಗಳ ಪ್ರಸ್ತಾವ ಮಾತ್ರ ಇತ್ತು. ನಾವು 2020ರವರೆಗಿನ ಶಾಲೆಗಳನ್ನೂ ಪರಿಗಣಿಸಲು ಉದ್ದೇಶಿಸಿದ್ದೇವೆ ಎಂದು ಹೇಳಿದರು.














