ಬೆಳಗಾವಿ: ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಯಾರು ತೆರಿಗೆ ಕಟ್ಟೊದಿಲ್ಲವೋ ಅಂತವರಿಗೆ ಗೃಹಲಕ್ಷ್ಮೀ ಹಣ ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ನಗರದಲ್ಲಿ ಬುಧವಾರ ಮಾಧ್ಯಮದವರೆದುರು ಅವರು ಸ್ಪಷ್ಟಪಡಿಸಿದರು.
ಎಪಿಎಲ್ ಕಾರ್ಡ್ ಇದ್ದವರಿಗೂ ಗೃಹಲಕ್ಷ್ಮೀ ಹಣ ಬರುತ್ತದೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ. 80 ಸಾವಿರ ಬಿಪಿಎಲ್ ಕಾರ್ಡ್ಗಳನ್ನ ರದ್ದತಿ ಮಾಡುವ ಬದಲು ಎಪಿಎಲ್‌ಗೆ ವರ್ಗಾಯಿಸಲಾಗಿದೆ. ಇದರಿಂದ ಯಾವುದೇ ಗೊಂದಲ ಇಲ್ಲ. ಎಪಿಎಲ್-ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬರುತ್ತದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಅಭಯ ನೀಡಿದರು.
ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ ವಿಚಾರಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯ ಸಾವು ವಿಚಾರ ಮಾಧ್ಯಮಗಳಲ್ಲಿ ನೋಡಿದ್ದೇನೆ. ತಪ್ಪಿತಸ್ಥ ವೈದ್ಯರ ಮೇಲೆ ಆದಷ್ಟು ಬೇಗ ಕಠಿಣ ಕ್ರಮವಾಗಬೇಕು. ನಾವು ಬರೀ ಹೇಳುವುದು ಆಗಬಾರದು, ಕಠಿಣ ಕ್ರಮವಾಗಬೇಕು ಎಂದು ಒತ್ತಾಯಿಸಿದರು.
ಬಿಮ್ಸ್ ಆಸ್ಪತ್ರೆಯ ಎಲ್ಲ ವ್ಯವಸ್ಥೆಯಲ್ಲೂ ಸರ್ಜರಿ ಆಗಬೇಕೆಂದು ನಾನು ಮೊದಲಿನಿಂದಲೂ ಹೇಳುತ್ತಿರುವೆ. ಶಿಸ್ತು, ಆರೋಗ್ಯ ದೃಷ್ಟಿಯಿಂದ ವೈದ್ಯರು, ನರ್ಸ್ಗಳು ಎಲ್ಲವನ್ನು ಸರಿಪಡಿಸುವ ಕೆಲಸವಾಗಬೇಕು. ನಾನು ಭೇಟಿ ನೀಡಿ ಪರಿಶೀಲನೆ ಮಾಡಿರುವೆ. ಆದರೂ ಮತ್ತೊಮ್ಮೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.














