ಮಂಗಳೂರು (Mangalore)- ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ 6 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಮತ್ತೊಂದೆಡೆ ತರಗತಿಗಳಿಗೆ ಹಾಜರಾಗುವಾಗ ಹಿಜಾಬ್ ಧರಿಸಿದ್ದಕ್ಕಾಗಿ 12 ವಿದ್ಯಾರ್ಥಿಗಳನ್ನು ಹಿಂದಕ್ಕೆ ಕಳುಹಿಸಲಾಗಿದೆ.
ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆರು ವಿದ್ಯಾರ್ಥಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ.
6 ವಿದ್ಯಾರ್ಥಿನಿಯರಿಗೆ ಸರ್ಕಾರದ ಆದೇಶ ಮತ್ತು ತರಗತಿ ಕೊಠಡಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಹೈಕೋರ್ಟ್‌ನ ತೀರ್ಪಿನ ಬಗ್ಗೆ ತಿಳಿ ಹೇಳಲಾಯಿತು. ಆದರೂ, ಹಿಜಾಬ್ ಮಾರ್ಗಸೂಚಿಗಳನ್ನು ಪದೇ ಪದೇ ಉಲ್ಲಂಘಿಸಿದ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರು ಕಾಲೇಜು ಉಪನ್ಯಾಸಕರ ಜತೆ ಸಭೆ ನಡೆಸಿದ ಬಳಿಕ ವಿದ್ಯಾರ್ಥಿಗಳನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ.
ಹಂಪನಕಟ್ಟೆ ಸಮೀಪದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಅಧಿಕಾರಿಗಳು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸುತ್ತಿದ್ದರೂ ಸಹ, ಗುರುವಾರ ಹಿಜಾಬ್ ಧರಿಸಿ ಬಂದ 16 ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಕಾಲೇಜು ಪ್ರಾಂಶುಪಾಲರು ತರಗತಿಗೆ ಪ್ರವೇಶ ನಿರಾಕರಿಸಿ ವಾಪಸ್ ಕಳುಹಿಸಿದ್ದಾರೆ. ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.
ನಂತರ, ವಿದ್ಯಾರ್ಥಿಗಳು ಕೂಡ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಬಿಡುತ್ತಿಲ್ಲ ಎಂದು ದೂರಿದ್ದರು. ಸರ್ಕಾರದ ನಿಯಮಗಳು ಮತ್ತು ನ್ಯಾಯಾಲಯದ ಆದೇಶವನ್ನು ಪಾಲಿಸುವಂತೆ ಡಿಸಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದರು. ಆದರೆ, ವಿದ್ಯಾರ್ಥಿಗಳು ಅದಕ್ಕೂ ಜಗ್ಗದೆ ಗುರುವಾರ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು.