ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಪ್ರತಿಭಟನಾಕಾರರು ಕಲ್ಲುತೂರಾಟ ನಡೆಸಿದ್ದು ಪೊಲೀಸರು ಲಾಟಿ ಪ್ರಹಾರ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 4ರ ಬಳಿ ಜಮಾವಣೆಗೊಂಡಿರುವ ಅಪಾರ ಸಂಖ್ಯೆಯ ಪಂಚಮಸಾಲಿ ಸಮುದಾಯದ ಬಾಂಧವರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದು, ಈ ವೇಳೆ ಪೊಲೀಸರು ತಡೆಹಿಡಿದಿದ್ದಾರೆ. ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ಪೊಲೀಸರು ದಿಗ್ಬಂಧನ ಹಾಕಿದ್ದಾರೆ. ಕಲ್ಲು ತೂರಾಟ ಹಾಗೂ ಲಾಠಿ ಪ್ರಹಾರದಲ್ಲಿ ಹತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಬೆಳಗಾವಿ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೇಲೆ ಸಾವಿರಾರು ಸಂಖ್ಯೆಯ ಸಮಾಜ ಬಾಂಧವರು ಜಮಾಯಿಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಮುಂದಾದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರಿಂದ ಮತ್ತಷ್ಟು ಕೆರಳಿದ ಪ್ರತಿಭಟನಾಕಾರರು, ರಸ್ತೆ ಮೇಲೆಯೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ತಡೆಹಿಡಿದಿದ್ದು ಕಿಲೋಮೀಟರ್ ಗಟ್ಟಲೇ ವಾಹನಗಳು ಹೆದ್ದಾರಿ ಮೇಲೆ ನಿಂತಿವೆ.