ಅಮೃತಸರ: ಪಂಜಾಬ್ ನ ಅಮೃತಸರದ ಇಸ್ಲಾಮಾಬಾದ್ ಪೊಲೀಸ್ ಠಾಣೆಯಲ್ಲಿ ಇಂದು (ಮಂಗಳವಾರ) ಮುಂಜಾನೆ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಇಂದು ಮುಂಜಾನೆ 3.15ರ ಸುಮಾರಿಗೆ ಪೊಲೀಸ್ ಠಾಣೆ ಬಳಿ ಸ್ಫೋಟದ ಶಬ್ದ ಕೇಳಿಸಿದೆ. ಆದರೆ, ಘಟನೆಯಲ್ಲಿ ಯಾವುದೇ ಹಾನಿಯಾಗಿಲ್ಲ. ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ಗಳನ್ನು ಹಂಚಿಕೊಂಡಿದ್ದ ಆರೋಪದ ಮೇಲೆ ಒಬ್ಬ ಬಾಲಾಪರಾಧಿ, ಇಬ್ಬರು ಸಹೋದರರು ಸೇರಿದಂತೆ ಒಟ್ಟು 10 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಅಮೃತಸರ ಪೊಲೀಸ್ ಕಮಿಷನರ್ ಗುರ್ಪ್ರೀತ್ ಸಿಂಗ್ ಭುಲ್ಲರ್ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಇನ್ನು ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಹಾಗೆಯೇ ಸ್ಫೋಟಕ್ಕೆ ಸಂಬಂಧಿಸಿ ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಗುರ್ಪ್ರೀತ್ ಸಿಂಗ್ ವಿವರಿಸಿದ್ದಾರೆ.