ಬೆಂಗಳೂರು : ಸಾರ್ವಜನಿಕ ಸಾರಿಗೆ ಬಸ್ಸು ಚಾಲಕ-ನಿರ್ವಾಹಕ (ಡ್ರೈವರ್ ಕಮ್ ಕಂಡಕ್ಟರ್) ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ, ಬಸ್ಸಿನಲ್ಲೇ ನಮಾಜ್ ಮಾಡಿದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಈ ಕುರಿತು ತಕ್ಷಣದ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಈ ಘಟನೆ ಏಪ್ರಿಲ್ 29ರಂದು ಸಂಭವಿಸಿದ್ದು, ಹುಬ್ಬಳ್ಳಿಯಿಂದ ಹಾವೇರಿಗೆ ಹೊರಟಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ ಬಸ್ಸಿನಲ್ಲಿಯೇ ನಮಾಜ್ ಮಾಡಲು ಮುಂದಾದರು. ಈ ದೃಶ್ಯವನ್ನು ಬಸ್ಸಿನಲ್ಲಿ ಇದ್ದ ಪ್ರಯಾಣಿಕನೊಬ್ಬರು ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿದವು.
ಸಚಿವ ರಾಮಲಿಂಗಾರೆಡ್ಡಿ ಅವರು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದು, ಈ ಸಂಬಂಧ ತಕ್ಷಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಸರ್ಕಾರಿ ನೌಕರರು ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕ ಸಂಪತ್ತನ್ನು ವ್ಯಕ್ತಿಗತ ಧಾರ್ಮಿಕ ಕಾರ್ಯಗಳಿಗೆ ಬಳಸುವಂತಿಲ್ಲ ಎಂಬುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. “ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಇದೆ, ಆದರೆ ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರ ಹಿತವನ್ನು ಮೀರಿ ಧಾರ್ಮಿಕ ಆಚರಣೆ ನಡೆಸುವುದು ಸರಿಯಲ್ಲ. ಬಸ್ಸಿನಲ್ಲಿ ಇನ್ನೂ ಪ್ರಯಾಣಿಕರು ಇದ್ದಾರೆ ಎಂಬ ಅಂಶವನ್ನು ಪರಿಗಣಿಸದೆ ಬಸ್ ನಿಲ್ಲಿಸಿ ನಮಾಜ್ ಮಾಡಿದಿದ್ದಾರೆ ಎಂಬ ವರದಿ ಅತ್ಯಂತ ಗಂಭೀರವಾಗಿದೆ,” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಈ ವಿಡಿಯೋ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಸೂಕ್ತ ಶಿಸ್ತಿನ ಕ್ರಮ ಜರುಗಿಸಲು ಸೂಚಿಸಿದೆ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸುವಂತೆ ಸೂಚಿಸಿದ್ದಾರೆ.














