ಬೆಂಗಳೂರು (Bengaluru): ನೂತನ ಲೋಕಾಯುಕ್ತರಾಗಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ನೇಮಕಗೊಂಡಿದ್ದಾರೆ.
ಬಿ.ಎಸ್.ಪಾಟೀಲ್ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಂದು ಅಂಕಿತ ಹಾಕಿದ್ದಾರೆ. ಬಿ.ಎಸ್.ಪಾಟೀಲ್ ಅವರು ನಾಳೆ ಬೆಳಿಗ್ಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಹಿಂದೆ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರು 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಈಗ ಬಿ.ಎಸ್. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಪಾಟೀಲ್ ಅವರು 2019ರ ನವೆಂಬರ್‌ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಜತೆ ಸಮಾಲೋಚಿಸಿದ ಬಳಿಕ ಬಿ.ಎಸ್.ಪಾಟೀಲ ಅವರ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿದ್ದರು. ಅದರಂತೆ ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದಾರೆ.