ಮಂಡ್ಯ: ಗ್ವಾರವಾನ್ವಿತ ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಮೇ 26 ರಿಂದ 29 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಇಂದು ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಉಪ ಲೋಕಾಯುಕ್ತರು ಮೇ 26ರಂದು ಸಂಜೆ 6.30 ಕ್ಕೆ ಮಂಡ್ಯ ಜಿಲ್ಲೆಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಮೇ 27 ರಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದರು.
ಅಹವಾಲು ಸ್ವೀಕಾರ ಮೇ 28ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ರವರೆಗೆ ನಗರದ ಸುಭಾಷ್ ನಗರದಲ್ಲಿರುವ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಂದ ದೂರು ಮತ್ತು ಅಹವಾಲು ಸ್ವೀಕರಿಸಲಿದ್ದಾರೆ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ, ನೌಕರರಿಂದ ಕಾನೂನು ರೀತಿ ನಿರ್ವಹಿಸಬೇಕಾದ ಕೆಲಸದಲ್ಲಿ ವಿಳಂಬವಾಗಿದ್ದರೆ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ಕಾರಣವಿಲ್ಲದೇ ತೊಂದರೆ ಕೊಡುವುದು, ಲಂಚಕ್ಕೆ ಬೇಡಿಕೆ ಇಡುವುದು, ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಉಪಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ ಎಂದರು.
ಕಾನೂನು ಸಾಕ್ಷರತಾ ಕಾರ್ಯಕ್ರಮ ಮೇ 28ರಂದು ಸಂಜೆ 5:00 ರಿಂದ 6:30 ರವರೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಡಿಎಲ್‌ಎಸ್‌ಎ) ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದಂತೆ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಕಂದಾಯ ಇಲಾಖೆ, ಆರ್‌ಡಿಪಿಆರ್ ಇಲಾಖೆ, ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಎಲ್ಲಾ ಇಲಾಖಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳುವುದು ಎಂದರು.
ಮೇ 29 ರಂದು ಬೆಳಿಗ್ಗೆ 9:45 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ನ್ಯಾಯಾಂಗ ಅಧಿಕಾರಿಗಳು, ವಕೀಲರು ಮತ್ತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದರು.
ಪ್ರಕರಣಗಳ ವಿಚಾರಣೆ ಮೇ 29ರಂದು ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 6:00 ರವರೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ/ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯ ವಿಚಾರಣೆ ನಡೆಸಲಿದ್ದಾರೆ ಸಂಬಂಧಿಸಿದವರಿಗೆ ಈಗಾಗಲೇ ನೋಟೀಸ್ ಕಳುಹಿಸಿಕೊಡಲಾಗಿದೆ.
ದೂರುದಾರರು ಮತ್ತು ಎದುರುದಾದರು ನಿಗದಿತ ಸಮಯಕ್ಕೆ ಹಾಜರಿರಬೇಕು ಎಂದರು.
ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಎರಡು ದಿನಗಳು ಕಾರ್ಯಕ್ರಮ ನಡಯುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮೂಲಭೂತ ವ್ಯವಸ್ಥೆಗಳು ಕಲ್ಪಿಸಬೇಕು. ಧ್ವನಿವರ್ಧಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ ಎಂದರು.
ಪರಿಶೀಲನೆಯ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣ ಗೌಡ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.














