ಮನೆ ರಾಜ್ಯ ಕಾಂಗ್ರೆಸ್‌ ನಿಂದ ರಾಜಭವನಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವರು ಪೊಲೀಸರ ವಶಕ್ಕೆ

ಕಾಂಗ್ರೆಸ್‌ ನಿಂದ ರಾಜಭವನಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವರು ಪೊಲೀಸರ ವಶಕ್ಕೆ

0

ಬೆಂಗಳೂರು (Bengaluru): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ನಡೆಸಿ ಮುತ್ತಿಗೆ ಹಾಕಲು ಮುಂದಾಗಿದ್ದು, ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ರಾಜ ಭವನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್​​​​ಪ್ರೆಸ್​​ ವೃತ್ತದ ಬಳಿ ಪೊಲೀಸರು ತಡೆದು, ವಶಕ್ಕೆ ಪಡೆದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ರಾಜ ಭವನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್​​​​ಪ್ರೆಸ್​​ ವೃತ್ತದ ಬಳಿ ಪೊಲೀಸರು ತಡೆದು, ವಶಕ್ಕೆ ಪಡೆದರು. ಬಳಿಕ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ವರದಿಗಳು ತಿಳಿಸಿವೆ.

ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಪೊಲೀಸರು ಬ್ಯಾರಿಕೇಡ್ ಹಾಕಿ ಕ್ವೀನ್ಸ್ ರಸ್ತೆಯನ್ನು ಬಂದ್ ಮಾಡಿದ್ದರು. ಪ್ರತಿಭಟನಾಕಾರರನ್ನು ಕರೆದುಕೊಂಡು ಹೋಗಲು ಕ್ವೀನ್ಸ್ ರಸ್ತೆಯಲ್ಲಿ ಬಿಎಂಟಿಸಿ ಬಸ್‌ ಅನ್ನು ಪೊಲೀಸರು ಅಡ್ಡ ಹಾಕಿದ್ದರು.

ನಿಗದಿತ ಸಮಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸದ ಕಾರಣ ಇಂದು ಬೆಳಿಗ್ಗೆ 9.30ಕ್ಕೆ ಆರಂಭವಾಗಬೇಕಿದ್ದ ಪ್ರತಿಭಟನಾ ಮೆರವಣಿಗೆ 11 ಗಂಟೆಗೆ ಆರಂಭವಾಯಿತು.

ಪ್ರತಿಭಟನಾ ಮೆರವಣಿಗೆ ಆರಂಭಕ್ಕೂ ಮುನ್ನ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಕಾರ್ಯಕರ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದೀರಿ. ಸಂಯಮ ಹಾಗೂ ಸೌಜನ್ಯದಿಂದ ನಡೆದುಕೊಳ್ಳಿ. ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡಬೇಡಿ ಎಂದು ಮನವಿ ಮಾಡಿಕೊಂಡರು.

ಸಿದ್ದರಾಮಯ್ಯ ಅವರು ಮಾತನಾಡಿ, ನಮ್ಮ ರಾಷ್ಟ್ರೀಯ ನಾಯಕರ ವಿರುದ್ಧ ಕೇಂದ್ರ ಸರ್ಕಾರ ನಡೆಸುತ್ತಿರುವ ಕಿರುಕುಳದ ವಿರುದ್ಧ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಕೆಪಿಸಿಸಿ ವತಿಯಿಂದ ಇಂದು ರಾಜಭವನ ಮುತ್ತಿಗೆ ಹಮ್ಮಿಕೊಂಡಿದ್ದೇವೆ. ನಮ್ಮ ಆಕ್ರೋಶವನ್ನು ಈ ರೂಪದಲ್ಲಿ ವ್ಯಕ್ತಪಡಿಸುತ್ತಿದ್ದೇವೆ. ಸಂವಿಧಾನ ಹಾಗೂ ಪ್ರಜಾತಂತ್ರವನ್ನು ಉಳಿಸುವುದಕ್ಕೋಸ್ಕರ ಮತ್ತು ದೇಶದ ಸ್ವಾಭಿಮಾನ ಉಳಿಸುವುದಕ್ಕೋಸ್ಕರ ಹೋರಾಟದಲ್ಲಿ ಭಾಗಿಯಾಗಿದ್ದೇವೆ ಎಂದು ಹೇಳಿದರು.