ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿಗೆ ಮೊದಲ ಬಲಿ ದಾಖಲೆಯಾಗಿದೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ 70 ವರ್ಷದ ವೃದ್ಧರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ.
ಮೃತರು ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ತೀವ್ರ ಜ್ವರ, ಶ್ವಾಸಕೋಶ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರಿಗೆ ಪ್ರತ್ಯೇಕ ಐಸೋಲೇಷನ್ ವಾರ್ಡ್ನಲ್ಲಿ ಕೊರೊನಾ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ತಡರಾತ್ರಿ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಈ ಸಂಬಂಧ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ಎಚ್ಚರಿಕೆ ವಹಿಸಿದ್ದು, ಮೃತರ ಸಂಪರ್ಕದಲ್ಲಿದ್ದ ಎಲ್ಲರನ್ನು ಗುರುತಿಸಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಬಿಮ್ಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಹಾಗೂ ಸಂಬಂಧಿಕರನ್ನೂ ನಿರ್ದಿಷ್ಟ ಮಾರ್ಗಸೂಚಿಯಂತೆ ತಪಾಸಣೆಗೆ ಒಳಪಡಿಸಲಾಗಿದೆ.














