ಮನೆ ರಾಜ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ: ಡಿಸಿ, ಸಿಇಓಗಳಿಗೆ ಸಿಎಂ ಎಚ್ಚರಿಕೆ

ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ: ಡಿಸಿ, ಸಿಇಓಗಳಿಗೆ ಸಿಎಂ ಎಚ್ಚರಿಕೆ

0

ಬೆಂಗಳೂರು: ರಾಜ್ಯದ ಜನರ ಸಮಸ್ಯೆಗಳತ್ತ ಸ್ಪಂದನೆ ಇಲ್ಲದ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ತೀವ್ರ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಖಡಕ್ ಎಚ್ಚರಿಕೆಯ ಮೂಲಕ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳಿಗೆ ಈ ಎಚ್ಚರಿಕೆ ನೀಡಲಾಗಿದೆ.

ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, “ನಾವು, ನೀವೆಲ್ಲಾ ಜನರ ತೆರಿಗೆ ಹಣದಿಂದಲೇ ಎಲ್ಲ ಸವಲತ್ತುಗಳನ್ನು ಪಡೆಯುತ್ತಿದ್ದೇವೆ. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ ಎಂದು ತಿಳಿಸುತ್ತಾ, ಜನರ ಸಮಸ್ಯೆಗಳಿಗೆ ಸ್ಪಂದಿಸದೇ ಕಚೇರಿಗಳಲ್ಲಿ ಕುಳಿತುಕೊಳ್ಳುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ ಎಂದು ಮತ್ತೊಮ್ಮೆ ಉಚ್ಚರಿಸಿದರು.

“ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅಭಿವೃದ್ಧಿ ಸಾಧ್ಯವಿಲ್ಲ. ಕೆಲವು ಸ್ಥಳಗಳಲ್ಲಿ ಸಂವಿಧಾನ ವಿರೋಧಿ, ಜನ ವಿರೋಧಿ ಶಕ್ತಿಗಳು ತಲೆ ಎತ್ತುತ್ತಿವೆ. ಅವರನ್ನು ನಿಯಂತ್ರಿಸದಿದ್ದರೆ ಅವರನ್ನಷ್ಟೇ ಅಲ್ಲ, ನಿಮ್ಮ ಮೇಲೆಯೂ ಕ್ರಮ ಕೈಗೊಳ್ಳಲಾಗುವುದು” ಎಂದು ತೀವ್ರವಾಗಿ ಎಚ್ಚರಿಸಿದರು.

ಸಿಎಂ ತಾಕೀತಾಗಿ ಹೇಳಿದರು: “ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ತಾಲ್ಲೂಕು ಅಥವಾ ಜಿಲ್ಲಾ ಕೇಂದ್ರಗಳಲ್ಲಿ ವಾಸವಿರಬೇಕು. ಜನರಿಗೆ ಲಭ್ಯವಿರಬೇಕು. ತಮ್ಮ ಪ್ರವಾಸ ಕಾರ್ಯಕ್ರಮ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು. ತಪಾಸಣಾ ವರದಿಯ ದಾಖಲೆಗಳನ್ನು ಖಡ್ಡಾಯವಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್‌ಗಳು, ವಸತಿ ಶಾಲೆಗಳಿಗೆ ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಆರೋಗ್ಯ, ಸಾರಿಗೆ ಸಂಚಾರದಂತಹ ಮೂಲಭೂತ ಸೌಕರ್ಯಗಳು ಲಭಿಸದಿದ್ದರೆ ಅದನ್ನು ಆಡಳಿತದ ವೈಫಲ್ಯವೆಂದೇ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಿಗೆ ಕನಿಷ್ಟ ಎರಡು ಬಾರಿ ಜಿಲ್ಲೆಗೆ ಭೇಟಿ ನೀಡಿ ಶಾಲೆಗಳು, ಆಸ್ಪತ್ರೆಗಳು, ಹಾಸ್ಟೆಲ್‌ಗಳ ಸ್ಥಿತಿ ಪರಿಶೀಲನೆ ಮಾಡಬೇಕು ಎಂದು ಸೂಚಿಸಿದರು. “ಅನಿರೀಕ್ಷಿತ ಭೇಟಿಯ ಮೂಲಕ ಕಾರ್ಯಕ್ಷಮತೆ ಪರೀಕ್ಷಿಸಿ, ವರದಿ ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು” ಎಂದರು.

ಇತ್ತೀಚಿನ ದಿನಗಳಲ್ಲಿ ಸಂವಿಧಾನ ವಿರೋಧಿ, ಜನ ವಿರೋಧಿ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ. ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಲ್ಲಿ ಕೆಲವು ಇಲಾಖೆಗಳು ಶೇ.100 ರಷ್ಟು ಪ್ರಗತಿ ತೋರಿಸಿಲ್ಲ. ಈ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ಎಂದು ವಾರ್ನಿಂಗ್‌ ಕೊಟ್ಟರು.

ಈ ವರ್ಷ 700ಕ್ಕೂ ಹೆಚ್ಚು ಬಾಲ್ಯವಿವಾಹ ನಡೆದಿರುವ ವರದಿಗಳ ಹಿನ್ನೆಲೆಯಲ್ಲಿ ಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ಇವೆಲ್ಲಾ ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರಲ್ಲ? ಕೆಳಸ್ತರದ ಅಧಿಕಾರಿಗಳಿಂದ ವರದಿ ಸಿಗದಿದ್ದರೆ ಅದು ನಿಮ್ಮ ದಕ್ಷತೆಯ ಕೊರತೆ” ಎಂದು ತಿಳಿಸಿದರು. ಕೆಲವೆಡೆ ಎಫ್‌ಐಆರ್ ಕೂಡ ದಾಖಲಾಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.