ನೆಲಮಂಗಲ: ಬೆಂಗಳೂರು ಬಳಿಯ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಿಂದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ಗೇ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಉಂಟಾಗಿದೆ.
ಶುಕ್ರವಾರ ತಡರಾತ್ರಿ ನ್ಯಾಷನಲ್ ಹೈವೇ 48ರ ತುಮಕೂರು-ಬೆಂಗಳೂರು ಮಾರ್ಗದ ತೊಣಚಿನಕುಪ್ಪೆ ಪ್ರವಾಸಿ ಡಾಬಾದ ಸಮೀಪ ಈ ಅಪಘಾತ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಕೆಕೆಆರ್‌ಟಿಸಿ ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮೃತಪಟ್ಟ ವ್ಯಕ್ತಿ ಒಬಳಾರೆಡ್ಡಿ (35) ಎಂದು ತಿಳಿದುಬಂದಿದ್ದು, ಇನ್ನಿಬ್ಬರು ಪ್ರಯಾಣಿಕರಾದ ಸುನಿಲ್ ಮತ್ತು ದಿವ್ಯ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ತಕ್ಷಣ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಪಘಾತದ ನಂತರ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸ್ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ವಾಹನ ತೆರವು ಕಾರ್ಯಾಚರಣೆ ನಡೆಸಲಾಯಿತು. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ವೇಗ ಹಾಗೂ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಅಂದಾಜಿಸಲಾಗಿದೆ.














