ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಹಿನ್ನಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ನಾಲ್ವರು ದುರ್ಮರಣ ಹೊಂದಿದ ಘಟನೆಯು ರಾಜ್ಯದಾದ್ಯಂತ ತೀವ್ರ ಆತಂಕ ಮೂಡಿಸಿದೆ. ಘಟನೆಯ ನಂತರ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ಕಡಲ ತೀರದ ಜಿಲ್ಲೆಯಲ್ಲಿ ಇತ್ತೀಚೆಗೆ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಣ್ಣು ಸಡಿಲವಾಗಿ ಗುಡ್ಡ ಕುಸಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೂವರು ಕಾಂತಪ್ಪ ಪೂಜಾರಿ ಅವರ ಮನೆಯವರಾಗಿದ್ದು, ಮತ್ತೊಬ್ಬ ನೌಶಾದ್ ಅವರ ಮನೆಯ ಬಾಲಕಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಸಚಿವ ಡಾ. ದಿನೇಶ್ ಗುಂಡೂರಾವ್, ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದು, ಪರಿಹಾರದ ಚೆಕ್ ವಿತರಿಸಿದ್ದಾರೆ. ಮೃತರ ಕುಟುಂಬಗಳ ನೋವಿನಲ್ಲಿ ಸರ್ಕಾರ ಜೊತೆಗೆ ನಿಂತಿದೆ ಎಂಬ ಭರವಸೆಯನ್ನು ಅವರು ನೀಡಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸಭೆಯಲ್ಲಿ ಸಚಿವರು, ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಮುಂದಿನ ದಿನಗಳಲ್ಲಿ ಹೆಚ್ಚು ಮಳೆ ಸಂಭವಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
- ಭೂಕುಸಿತ ಸಂಭವಿಸಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಆದೇಶ.
- ತಾಲೂಕು ಮತ್ತು ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗಳು 24×7 ಕಾರ್ಯನಿರ್ವಹಣೆಗೆ ಸೂಚನೆ.
- ಜನರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದನೆ ನೀಡಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ.
- ಪಂಪ್‌ವೆಲ್, ಕೊಟ್ಟಾರಚೌಕಿ, ಕೆತ್ತಿಕಲ್ ಸೇರಿದಂತೆ ಮಳೆಗಾಲದಲ್ಲಿ ಸಮಸ್ಯೆ ಉಂಟಾಗುವ ಪ್ರದೇಶಗಳಿಗೆ ಶಾಶ್ವತ ಪರಿಹಾರ ಕ್ರಮಕ್ಕೆ ತಂತ್ರಜ್ಞಾನಾಧಾರಿತ ಯೋಜನೆ ರೂಪಿಸಲು ಪ್ರಸ್ತಾವನೆ.
ಮೆಸ್ಕಾಂ ಮತ್ತು ಲೋಕೋಪಯೋಗಿ ಇಲಾಖೆ ಸೇರಿದಂತೆ ಇತರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಜವಾಬ್ದಾರಿತನದ ಬಗ್ಗೆ ಸಚಿವರು ಸ್ಪಷ್ಟ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದ ಜೆಇ/ಎಇ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದ್ದಾರೆ.














