ಬೆಂಗಳೂರು(Bengaluru): ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿರುವ ಸೈನಿಕರ ನೇಮಕಾತಿಯ ಹೊಸ ನೀತಿ ‘ಅಗ್ನಿಪಥ್ ಯೋಜನೆ’ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಸರಣಿ ಟ್ವೀಟ್ ಮೂಲಕ ಕೇಂದ್ರದ ನೀತಿಯನ್ನು ಟೀಕಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ರೈತರನ್ನು ಬಲಿಕೊಟ್ಟಾಯಿತು. ಈಗ ಸೈನಿಕರ ಸರದಿಯೇ?’ ಎಂದು ಪ್ರಶ್ನಿಸಿದ್ದಾರೆ.
ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರ ಸರ್ಕಾರ ಇದೀಗ ಯುವಜನರ ಬದುಕು ನಾಶ ಮಾಡಲು ಹೊರಟಿದೆ. ಜನರು ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದ್ದಾರೆ.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? ಎಂದು ಕೇಳಿದ್ದಾರೆ.
ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ? ಎಂದು ಮತ್ತೊಂದು ಪ್ರಶ್ನಿಸಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರವು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ದಿವಾಳಿಯಾಗಿದೆಯೇ? ಮೋದಿಯವರೇ, ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ ಎಂದು ಕುಟುಕಿದ್ದಾರೆ.
ಜನರು ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದು ಕಿವಿಮಾತು ಹೇಳಿರುವ ಅವರು, ಹೊಸ ಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ ಎಂದು ಎಚ್ಚರಿಸಿದ್ದಾರೆ.
ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.ಅಗ್ನಿಪಥ್ ಯೋಜನೆ ವಿರೋಧಿಸಿ ಬಿಹಾರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಇಂದು ಎರಡು ರೈಲುಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಬಿಹಾರ ಮಾತ್ರವಲ್ಲದೆ, ಉತ್ತರ ಪ್ರದೇಶದ, ರಾಜಸ್ಥಾನ, ಹರಿಯಾಣದಲ್ಲಿಯೂ ಯೋಜನೆಗೆ ವಿರೋಧ ವ್ಯಕ್ತವಾಗಿದೆ.