ಬೆಂಗಳೂರು: ಕಮಲ್ ಹಾಸನ್ ನೀಡಿರುವ ವಿವಾದಾತ್ಮಕ ಹೇಳಿಕೆಯಿಂದ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಅಲ್ಲದೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಮೊಂಡುತನ ತೋರಿದ್ದಾರೆ. ಇದೀಗ ಅವರ ಹೊಸ ಸಿನಿಮಾ ‘ಥಗ್ ಲೈಫ್’ ರಾಜ್ಯದಲ್ಲಿ ಬಿಡುಗಡೆಗೆ ನಿರ್ಬಂಧ ವಿಧಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿರ್ಣಯಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕಮಲ್ ಹಾಸನ್ ಅವರು “ಕನ್ನಡ ಹುಟ್ಟಿದ್ದೇ ತಮಿಳಿನಿಂದ” ಎಂಬ ಹೇಳಿಕೆಯನ್ನು ನೀಡಿದ ನಂತರ ರಾಜ್ಯಾದ್ಯಂತ ಕನ್ನಡಾಭಿಮಾನಿಗಳಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಬೆಂಗಳೂರಿನಿಂದ ಹಿಡಿದು ಜಿಲ್ಲೆಯ ಮಟ್ಟದವರೆಗೆ ಪ್ರತಿಭಟನೆಗಳು ಶಕ್ತಿಯಾಗಿವೆ. ಇಂತಹ ಸಂದರ್ಭದಲ್ಲಿಯೇ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕೆಲವು ಕನ್ನಡ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ‘ಥಗ್ ಲೈಫ್’ ಸಿನಿಮಾ ರಾಜ್ಯದಲ್ಲಿ ಬಿಡುಗಡೆ ಆಗದಂತೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಈ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕನ್ನಡದ ಗೌರವಕ್ಕೆ ಧಕ್ಕೆಯಾಗುವ ಯಾವುದೇ ಕೃತ್ಯವನ್ನು ಸರ್ಕಾರ ಸಹಿಸಲ್ಲ. ಕನ್ನಡಿಗರ ಭಾವನೆಗೆ ಅವಮಾನವಾಗುವಂತಹ ಸಿನಿಮಾಗಳನ್ನು ಕರ್ನಾಟಕದಲ್ಲಿ ಬಿಡೋದು ಸಾಧ್ಯವಿಲ್ಲ. ಸರ್ಕಾರ ಎಲ್ಲ ರೀತಿಯ ಕಾನೂನು ಬೆಂಬಲ ಒದಗಿಸುತ್ತದೆ” ಎಂದು ಭರವಸೆ ನೀಡಿದ್ದಾರೆ.
ಸಿನಿಮಾ ಬಿಡುಗಡೆ ವಿರೋಧಿಸಿ ರಾಜ್ಯದ ವಿವಿಧ ಕನ್ನಡಪರ ಸಂಘಟನೆಗಳು, ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಪ್ರತಿಭಟನಾಕಾರರು ಒಟ್ಟಿಗೆ ನಿಂತು ಸರ್ಕಾರದ ಮೊರೆ ಹೋಗಿದ್ದಾರೆ. ಈ ಕುರಿತಾಗಿ ವಿಶೇಷ ಸಭೆ ನಡೆದಿದ್ದು, ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ನೀಡದಂತೆ ನಿರ್ಧಾರ ಕೈಗೊಳ್ಳಲಾಗಿದೆ.














