ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ಗುರುವಾರ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತದ ಪರಿಣಾಮ ದೇಶವನ್ನೆಲ್ಲ ಮಡುಗಟ್ಟುಹಾಕಿದೆ. ಲಂಡನ್ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲೆ ಬೀಳುವುದರೊಂದಿಗೆ ಭೀಕರ ಅಗ್ನಿಕಾಂಡ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 265 ಜನರು ಸಾವನ್ನಪ್ಪಿದ್ದು, ಕೇವಲ ಒಬ್ಬ ವ್ಯಕ್ತಿ ಮಾತ್ರ ಅದೃಷ್ಟವಶಾತ್ ಬದುಕುಳಿದಿದ್ದಾರೆ.
ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯಾಗಿದ್ದಾರೆ ಎಂದು ಏರ್ ಇಂಡಿಯಾ ಖಚಿತಪಡಿಸಿದೆ. ಘಟನೆಯ ತೀವ್ರತೆಗೆ ಸಾರ್ವಜನಿಕರು ಹಾಗೂ ಸಿಬ್ಬಂದಿ ಚಿಕ್ಕದೊಂದು ಆಸರೆಗಾಗಿ ತತ್ತರಿಸಿದರೆ, ವಿಮಾನ ಹತ್ತಿರವಿದ್ದ ಕಟ್ಟಡದಲ್ಲಿದ್ದ ವಿದ್ಯಾರ್ಥಿಗಳೂ ಕೂಡ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಮಧ್ಯೆ, ದುರಂತದ ಸುದ್ದಿ ತಿಳಿದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ತ್ವರಿತ ಕ್ರಮವಾಗಿ ಅಹಮದಾಬಾದ್ಗೆ ತೆರಳಿ, ಗಾಯಾಳುಗಳ ಬಗ್ಗೆ ಮಾಹಿತಿ ಪಡೆದು ಅವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅವರು ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ್ದು, ವೈದ್ಯರಿಂದ ಚಿಕಿತ್ಸೆ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಗಾಯಾಳುಗಳ ಆರೋಗ್ಯ ಸ್ಥಿತಿ ತಿಳಿದುಕೊಂಡರು. ಮೃತರ ಕುಟುಂಬಗಳಿಗೆ ನನ್ನ ಭಾವಪೂರ್ಣ ಸಂತಾಪ. ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ಒದಗಿಸಲಾಗುವುದು” ಎಂದು ಭರವಸೆ ನೀಡಿದರು.
ಪೊಲೀಸರು, ಎನ್ಡಿಆರ್ಎಫ್ ತಂಡಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಹತ್ತಿರದ ಕಟ್ಟಡಗಳಲ್ಲಿ ಸಿಲುಕಿದ ಹಲವರನ್ನು ರಕ್ಷಿಸಲಾಗಿದೆ. ಆದರೆ, ಬೆಂಕಿಯ ತೀವ್ರತೆಗೆ ಹೆದರಿದ ಕೆಲವರು ಹೊರಬರಲು ಸಾಧ್ಯವಾಗದೆ ಸಾವಿಗೀಡಾಗಿದ್ದಾರೆ.














