ಮನೆ ರಾಜ್ಯ ಅಂಜನಾದ್ರಿ ಬೆಟ್ಟ ಸೇರಿ – 11 ಪ್ರವಾಸಿತಾಣಗಳ ರೋಪ್ ವೇಗೆ ಸರ್ಕಾರ ಅನುಮೋದನೆ..!

ಅಂಜನಾದ್ರಿ ಬೆಟ್ಟ ಸೇರಿ – 11 ಪ್ರವಾಸಿತಾಣಗಳ ರೋಪ್ ವೇಗೆ ಸರ್ಕಾರ ಅನುಮೋದನೆ..!

0

ಬೆಂಗಳೂರು : ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಿಗೆ ರೋಪ್ ವೇ ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದೆ. ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು (ಬುಧವಾರ) ಮಹತ್ವದ ಸಭೆ ನಡೆಯಿತು. ಈ ವೇಳೆ ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಿಗೆ ರೋಪ್ ವೇ ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದೆ.

ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿರುತ್ತದೆ ಎಂದು ಸಿಎಂ ಕಚೇರಿ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಅಂಜನಾದ್ರಿ ಬೆಟ್ಟದ ಪ್ರವಾಸೋದ್ಯಮ ಮತ್ತು ಪೌರಾಣಿಕ ಹಾಗೂ ಆಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿಗೊಳಿಸಬೇಕು ಸಿಎಂ ಸೂಚಿಸಿದ್ದಾರೆ. ಅಲ್ಲದೆ ವಯಸ್ಕರು ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳನ್ನು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ ನಡೆದಿದೆ.

ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ವಸತಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಸಿಎಂ ತಿಳಿಸಿದ್ದಾರೆ.

ಸದರಿ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ 10 ಕೋಟಿ ರೂ.ಯನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯು ಎನ್‌ಓಸಿ ನೀಡಬೇಕು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.

ಸಭೆಯಲ್ಲಿ ಸಚಿವರಾದ ಹೆಚ್.ಕೆ ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.