ಮನೆ ರಾಜ್ಯ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ನಿರ್ದಾಕ್ಷಿಣ್ಯ  ಕ್ರಮ: ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ನಿರ್ದಾಕ್ಷಿಣ್ಯ  ಕ್ರಮ: ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌

0

ಬೆಂಗಳೂರು(Bengaluru): ನಗರದಲ್ಲಿ ಅನಧಿಕೃತವಾಗಿ ಯಾರಾದರೂ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್‌, ಬ್ಯಾನರ್‌ಗಳ ತೆರವಿಗೆ ಒಂದು ವಾರ ಗಡುವು ನೀಡಲಾಗಿತ್ತು. ಇದುವರೆಗೆ 16454 ಫ್ಲೆಕ್ಸ್‌ಗಳನ್ನು ಪಾಲಿಕೆಯಿಂದಲೇ ತೆರವುಗೊಳಿಸಿದ್ದು, ಇದಕ್ಕೆ ತಗಲಿದ ವೆಚ್ಚವನ್ನು ಸಂಬಂಧಪಟ್ಟವರಿಂದಲೇ ವಸೂಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಿದ್ದ ವೇಳೆ ರಾತ್ರೋರಾತ್ರಿ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ಹೀಗಾಗಿ, ತಡೆಯಲು ಸಾಧ್ಯವಾಗಿಲ್ಲ. ಇದೀಗ ತೆರವು ಕಾರ್ಯ ಕೈಗೊಂಡಿದ್ದು, 2-3 ದಿನಗಳಲ್ಲಿ ಎಲ್ಲ ಫ್ಲೆಕ್ಸ್‌ಗಳನ್ನು ಕಿತ್ತು ಹಾಕಲಾಗುವುದು ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ 23.50 ಕೋಟಿ ರೂ. ವೆಚ್ಚದಲ್ಲಿ 14 ಕಿ.ಮೀ ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮರಿಯಪ್ಪನ ಪಾಳ್ಯದ ಬಳಿ ಹೊಸದಾಗಿ ಹಾಕಲಾಗಿದ್ದ ಡಾಂಬರು ಮಳೆಯಿಂದ ಕಿತ್ತು ಹೋಗಿತ್ತು. ಆ ರಸ್ತೆಯನ್ನು ಸಂಬಂಧಪಟ್ಟ ಗುತ್ತಿಗೆದಾರರ ಮೂಲಕವೇ ದುರಸ್ತಿಪಡಿಸಲಾಗುತ್ತಿದೆ  ಎಂದು ಸ್ಪಷ್ಟಪಡಿಸಿದರು.

ಕೆ.ಆರ್‌.ಪುರಂ ಸಮೀಪದ ಸಾಯಿ ಲೇಔಟ್‌ನಲ್ಲಿ ಮಳೆ ಹಾನಿ ಸಂಭವಿಸದಂತೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತ್ಯೇಕ ಕಾಲುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಸಮಸ್ಯೆ ಬಗೆಹರಿಯಲಿದೆ. ಅಲ್ಲಿಯವರೆಗೆ ಮನೆಗಳಿಗೆ ನೀರು ನುಗ್ಗಿ ಹಾನಿಯಾದರೆ, ಪಾಲಿಕೆ ವತಿಯಿಂದ ಪರಿಹಾರ ನೀಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.