ಭೋಪಾಲ್ : ಇಂದೋರ್‌ನ ಭಾಗೀರಥಪುರದಲ್ಲಿ ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 200 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 1,400ಕ್ಕೂ ಅಧಿಕ ಜನರು ವಾಂತಿ, ಭೇದಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಕಳೆದ 8 ವರ್ಷಗಳಿಂದ ಇಂದೋರ್ ಭಾರತದ ಅತ್ಯಂತ ಸ್ವಚ್ಛ ನಗರವೆಂದು ಖ್ಯಾತಿ ಪಡೆದಿದೆ. ಈಗ ಅದೇ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಜನ ಸಾವನ್ನಪ್ಪುತ್ತಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಯೋಗಾಲಯದಲ್ಲಿ ನೀರಿನ ಪರೀಕ್ಷೆ ನಡೆದಿದ್ದು, ಕಲುಷಿತ ನೀರಿನಿಂದಾಗಿ ಜನರು ಅಸ್ವಸ್ಥರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇಂದೋರ್‌ನ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ಮಾಧವ ಪ್ರಸಾದ್ ಹಸಾನಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಭಾಗೀರಥಪುರದಲ್ಲಿ ಪೈಪ್‌ಲೈನ್ ಸೋರಿಕೆಯಿಂದಾಗಿ ಕುಡಿಯುವ ನೀರು ಕಲುಷಿತಗೊಂಡಿರುವುದು ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದೆ ಎಂದು ಹೇಳಿದ್ದಾರೆ.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ದುಬೆ ಮಾತನಾಡಿ, ಭಾಗೀರಥಪುರದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಬೇರೆ ಯಾವುದಾದರೂ ಕಲುಷಿತ ನೀರು ಸೇರಿಕೊಂಡಿದ್ದಾರೆ ಎಂದು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದಾರೆ. ಗುರುವಾರದಿಂದ (ಜ.1) ಮನೆಗಳಿಗೆ ಪೈಪ್‌ಲೈನ್ ಮೂಲಕ ಶುದ್ಧ ನೀರನ್ನು ಸರಬರಾಜು ಮಾಡಲಾಗಿದೆ. ಆದರೂ ಕೂಡ ಜನರಿಗೆ ನೀರನ್ನು ಕುದಿಸಿ, ನಂತರ ಕುಡಿಯಬೇಕು ಎಂದು ಸೂಚನೆ ನೀಡಿದ್ದಾರೆ.
ಗುರುವಾರ ಭಾಗೀರಥಪುರದಲ್ಲಿ 1,714 ಮನೆಗಳ ಸಮೀಕ್ಷೆ ನಡೆಸಲಾಗಿದ್ದು, 8,571 ಜನರನ್ನು ಪರೀಕ್ಷಿಸಲಾಗಿದೆ. ಈ ವೇಳೆ 334 ಜನರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಕಳೆದ 8 ದಿನಗಳಲ್ಲಿ 272 ಜನರು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದು, ಅವರಲ್ಲಿ 71 ಜನರು ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 201 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು 32 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.















