ಮನೆ ರಾಜ್ಯ ದಕ್ಷಿಣ ಜಿಲ್ಲೆಯಾದ್ಯಂತ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಜಿಲ್ಲೆಯಾದ್ಯಂತ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

0

ಮಂಗಳೂರು (Mangalore): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಧಾರಾಕಾರ ಮಳೆಯಾಗಿದ್ದು, ಹಲವೆಡೆ ಜಲಾವೃತವಾಗಿವೆ. ಮಂಗಳೂರು ನಗರದಲ್ಲಿ ಬಹುತೇಕ ಕಡೆ ರಸ್ತೆಗಳಲ್ಲೆಲ್ಲಾ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ನಗರದಾದ್ಯಂತ ಸಂಚಾರ ದಟ್ಟಣೆ ಉಂಟಾಗಿದೆ.

ಮಂಗಳೂರು ನಗರದ ಪಡೀಲು, ಪಂಪ್ ವೆಲ್, ಬೆಜೈ, ಅತ್ತಾವರ, ನೀರುಮಾರ್ಗಗಳಲ್ಲೆಲ್ಲಾ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಾರ ಚೌಕಿ ಬಳಿ ರಾಜಕಾಲುವೆ ತುಂಬಿ ಹರಿದಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮರವೂರು ಸೇತುವೆ ಹತ್ತಿರದ ರಸ್ತೆಗಳು ಧಾರಾಕಾರ ಮಳೆಗೆ ಹಾನಿಗೀಡಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. 

ಮಂಗಳೂರಿನಂತೆ ಉಡುಪಿ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆಯಾಗಿದೆ. ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ನದಿಗಳಲ್ಲಿ ನೀರಿನ ಮಟ್ಟ ಸ್ವಲ್ಪ ಹೆಚ್ಚಳವಾಗಿದೆ.

ಉಡುಪಿ ನಗರದ ಶಾರದಾನಗರದಲ್ಲಿ ಅಪಾರ್ಟ್‌ಮೆಂಟ್‌ನ ಪಾರ್ಕಿಂಗ್ ಸ್ಥಳ ಜಲಾವೃತಗೊಂಡಿತ್ತು. ಬೈಲಕೆರೆಯಲ್ಲಿ ರಸ್ತೆಗಳು ನೀರಿನಿಂದ ಮುಳುಗಿಹೋಗಿದ್ದವು. ವಾಹನಗಳ ಸಂಚಾರಕ್ಕೆ ಕೆಲಕಾಲ ಅಡ್ಡಿಯಾಯಿತು.

ರಜೆ ಘೋಷಣೆ: 

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಶಾಲಾ-ಕಾಲೇಜುಗಳಿಗೆ ಜುಲೈ 1 ರಂದು ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ದಕ್ಷಿಣ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯ ಶಾಲೆಗಳಿಗೆ ವಿದ್ಯಾರ್ಥಿಗಳು ಆಗಮಿಸಿದ್ದರೆ ಎಲ್ಲಾ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶಾಲೆ ತಲುಪಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದ್ದು, ತಾಲೂಕುಗಳಲ್ಲಿ ತಹಶೀಲ್ದಾರ್‌ಗಳು ಮತ್ತು ಬ್ಲಾಕ್ ಶಿಕ್ಷಣಾಧಿಕಾರಿಗಳಿಗೆ ಇಂದಿನ ಪರಿಸ್ಥಿತಿಯನ್ನು ಅವಲೋಕಿಸಿ ರಜೆ ಘೋಷಿಸುವಂತೆ ಆದೇಶ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ಆದಾಗ್ಯೂ, ಈಗಾಗಲೇ ಶಾಲೆಗಳಲ್ಲಿ ಪಾಠ ಪ್ರವಚನಗಳು ನಡೆಯುತ್ತಿದ್ದರೆ ತರಗತಿಗಳನ್ನು ಮುಚ್ಚುವ ಅಗತ್ಯವಿಲ್ಲ. ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಉಡುಪಿಯಲ್ಲೂ ರಜೆ ಘೋಷಣೆ:

ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಮುಂದಿನ 2 ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜುಲೈ 1ರಂದು ಶಾಲಾ ಕಾಲೇಜು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

ನೆರೆ ರಕ್ಷಣಾ ಕಾರ್ಯಕ್ಕೆ ಸಿದ್ಧತೆ:

ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ನೆರೆ ಬಂದರೆ ಮುಂಜಾಗ್ರತಾ ಕ್ರಮವಾಗಿ ರಕ್ಷಣಾ ಕಾರ್ಯಕ್ಕೆ ಬೋಟ್‌ಗಳ ವ್ಯವಸ್ಥೆ ಮಾಡಲಾಗಿದೆ. ನೆರೆ ರಕ್ಷಣಾ ಕಾರ್ಯಾಚರಣೆಗೆ ಸಿಬ್ಬಂದಿ ಹಾಗೂ ಸ್ವಯಂಸೇವಕರ ತಂಡ ಸಜ್ಜಾಗಿದ್ದು, ಅಗತ್ಯ ತರಬೇತಿ ನೀಡಲಾಗಿದೆ. ನಗರದ ತಗ್ಗು ಪ್ರದೇಶಗಳಿಗೆ, ತೋಡುಗಳು ಹರಿಯುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಸ್ಥಳೀಯರಿಂದ ಅಹವಾಲು ಆಲಿಸಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಸಹಾಯವಾಣಿ ಆರಂಭಿಸಲಾಗಿದೆ. ಮೆಸ್ಕಾಂ ಸಂಬಂಧಿ ಸಮಸ್ಯೆಗಳನ್ನು ಪರಿಹರಿಸಲು ಪ್ರತ್ಯೇಕ ಹೆಲ್ಪ್‌ಲೈನ್ ತೆರೆಯಲಾಗಿದೆ. ಮಳೆ ಹೆಚ್ಚಾದರೆ ಶಾಲೆಗಳ ಮುಖ್ಯೋಪಾದ್ಯರಿಗೆ ರಜೆ ನೀಡುವ ಅಧಿಕಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದ್ದಾರೆ.