ಬೆಂಗಳೂರು(Bengaluru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಜಿಲ್ಲೆಗಳ ಕೋರ್ಟ್ ಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿಯಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ 32 ಕೋಟಿ ರೂ, ಮೂಡಿಗೆರೆಯಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ರೂ. 11 ಕೋಟಿ, ಕೋಲಾರದಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ರೂ. 25 ಕೋಟಿ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಶ್ರೀನಿವಾಸಪುರದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ 15 ಕೋಟಿ, ರಾಯಚೂರು ಜಿಲ್ಲಾ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ 27 ಕೋಟಿ ಹಾಗೂ ದಾವಣಗೆರೆ ಜಿಲ್ಲೆ ಕುಂದವಾಡದಲ್ಲಿನ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ 22 ಕೋಟಿ ರೂಪಾಯಿ, ಬಳ್ಳಾರಿಯ ಪಾರ್ವತಿ ನಗರದಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ 121 ರೋಟಿ ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಬೆಂಗಳೂರು ನಗರದ ಎಲ್ಲಾ ವಾರ್ಡ್ ಗಳಲ್ಲಿ 103 ಕೋಟಿ ರೂ. ವೆಚ್ಚದಲ್ಲಿ ನಮ್ಮ ಕ್ಲಿನಿಕ್ ಆರಂಭಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. 438 ಹುದ್ದೆಗಳನ್ನು ಸೃಷ್ಟಿಸಿ ನಮ್ಮ ಕ್ಲಿನಿಕ್ ಆರಂಭಿಸಲಾಗುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗ ಹತೋಟಿಗೆ ತರಲು ಸಾಧ್ಯ, ಸರ್ಕಾರಿ ಆಸ್ಪತ್ರೆ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಮಾಹಿತಿ ನೀಡಿದರು.