ಮನೆ ರಾಜ್ಯ ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು; ಯುಕೆಪಿ ಯೋಜನೆಗಳ ಜಾರಿ – ಡಿಕೆಶಿ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು; ಯುಕೆಪಿ ಯೋಜನೆಗಳ ಜಾರಿ – ಡಿಕೆಶಿ

0

ಬೆಂಗಳೂರು : ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ನಜೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು.

ನೀವೆಲ್ಲರೂ ಬೆಂಗಳೂರಿನಲ್ಲಿದ್ದೀರಿ. ಇಲ್ಲಿ 1.50 ಕೋಟಿ ಜನಸಂಖ್ಯೆ ಇದ್ದು, ವಿಶ್ವದಾದ್ಯಂತ ಕೈಗಾರಿಕೋದ್ಯಮಿಗಳು ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಇಡೀ ವಿಶ್ವ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಇಲ್ಲಿರುವ ಹವಾಮಾನ ಹಾಗೂ ಸಂಸ್ಕೃತಿ ಎಲ್ಲರ ಆಕರ್ಷಣೆಯಾಗಿದೆ. ಎಲ್ಲರೂ ಬೆಂಗಳೂರಿಗೆ ಬರಲು ಇಚ್ಛಿಸುತ್ತಿದ್ದಾರೆ. ಹೀಗಾಗಿ ಎಲ್ಲರಿಗೂ ನೀರು ಪೂರೈಸುವ ಜವಾಬ್ದಾರಿ ನಮ್ಮ ಮೇಲಿದೆ.

ಹೀಗಾಗಿ ನಾವು ಸಮತೋಲಿದ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದ್ದು, ಇತ್ತೀಚೆಗೆ ಸುಪ್ರೀಂ ಕೋರ್ಟ್ ಈ ಯೋಜನೆ ಪರವಾಗಿ ತೀರ್ಪು ನೀಡಿದೆ. ಆಮೂಲಕ ನಾವು ಈ ಯೋಜನೆ ಜಾರಿ ಮಾಡಲಿದ್ದು, ಕೇಂದ್ರ ಸರ್ಕಾರದ ಅನುಮತಿಗೆ ಕಾಯುತ್ತಿದ್ದೇವೆ. ಈ ಯೋಜನೆಯಿಂದ ಬೆಂಗಳೂರು ಸೇರಿದಂತೆ ಈ ಭಾಗದ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ 400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ ಎಂದು ವಿವರಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ನಾವು ಪಾರದರ್ಶಕ ನೀತಿ ತರಲಾಗಿದ್ದು, ಭೂಮಿ ಕಳೆದುಕೊಳ್ಳುವ ರೈತರಿಗೆ 2013ರ ಕಾಯ್ದೆ ಅನುಸಾರ ಉತ್ತಮ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. 2025ರ ಡಿಸೆಂಬರ್ ವೇಳೆಗೆ ನಮ್ಮಲ್ಲಿ 1.72 ಲಕ್ಷ ಎಕರೆಯಷ್ಟು ಕೃಷಿ ಭೂಮಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಇನ್ನು ಅಣೆಕಟ್ಟು ಸುರಕ್ಷತಾ ಮಾರ್ಗಸೂಚಿಯಲ್ಲಿ ಅಣೆಕಟ್ಟಿನ ಸುತ್ತ 500 ಮೀಟರ್ ವರೆಗೂ ವಿಧಿಸಲಾಗಿರುವ ನಿಬಂಧನೆಯನ್ನು ಸಡಿಲಗೊಳಿಸಬೇಕು. ಆ ಮೂಲಕ ಅಣೆಕಟ್ಟುಗಳ ಬಳಿ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಿ ಸ್ಥಳೀಯ ಆರ್ಥಿಕತೆಗೆ ನೆರವಾಗಬೇಕು ಎಂದು ಕರ್ನಾಟಕ ಸರ್ಕಾರದ ಪರವಾಗಿ ಮನವಿ ಮಾಡುತ್ತೇನೆ ಎಂದು ಕೋರಿದರು.