ಮನೆ ಸುದ್ದಿ ಜಾಲ ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು…!

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು…!

0

ಜೈಪುರ : ಭಿವಾಡಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಖಾನೆಯಲ್ಲಿ 20ರಿಂದ 25 ಜನ ಕಾರ್ಮಿಕರಿದ್ದರು. ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಕಾರ್ಖಾನೆಯ ತುಂಬೆಲ್ಲಾ ಆವರಿಸಿಕೊಂಡಿದ್ದು, ಕೆಲವು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.

ಈ ಕುರಿತು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಮಿತಾ ಮಿಶ್ರಾ ಮಾತನಾಡಿ, ಈ ಪ್ರದೇಶದಲ್ಲಿ ಪೊಲೀಸರು ದಿನನಿತ್ಯ ಗಸ್ತು ತಿರುಗುತ್ತಾರೆ. ಅದರಂತೆ ಇಂದು ಗಸ್ತು ತಿರುಗುವಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ವೈದ್ಯಕೀಯ ತಂಡ ದೌಡಾಯಿಸಿವೆ. ಸುಮಾರು ಒಂದೂವರೆ ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.

ಘಟನೆಗೆ ಸಂಬಂಧಿಸಿದಂತೆ ಈವರೆಗೂ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ತಿಜಾರಾ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವರಾಜ್ ಸಿಂಗ್ ಅವರು ಘಟನಾ ಸ್ಥಳದಲ್ಲಿ ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಮತ್ತು ಎಡಿಎಂ ಸೇರಿದಂತೆ ಹಿರಿಯ ಜಿಲ್ಲಾ ಅಧಿಕಾರಿಗಳು ಪರಿಸ್ಥಿತಿಯ ವಿವರವಾದ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿಗೆ ನಿಖರ ಕಾರಣ ತಿಳಿಯಲು ಜಿಲ್ಲಾಡಳಿತವು ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಸ ಸೂಚಿಸಿದ್ದು. ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡವೊಂದು ದುರಂತ. ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.