ಶಿವಮೊಗ್ಗ : ಅನ್ಯಕೋಮಿನ ಅಪ್ರಾಪ್ತರಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬನ ಹತ್ಯೆ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮಗನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಶಿವಮೊಗ್ಗ ತಾಲೂಕಿನ ಊರಗಡೂರಿನಲ್ಲಿ ಘಟನೆ ನಡೆದಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ (15) ಎಂಬಾತನ ಹತ್ಯೆಯಾಗಿದೆ. ಶಾಲೆಯಲ್ಲಿ ವಿಶೇಷ ತರಗತಿ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಂಕೇತ್ನ ಸ್ನೇಹಿತ ಗಿರೀಶ್ ಜೊತೆಗೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ಸಂಕೇತ್ನ ಎದೆಗೆ ಗುದ್ದಿದ್ದಾರೆ.
ಆಗ ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಈ ವೇಳೆಗಾಗಲೇ ಸಂಕೇತ್ ಮೃತಪಟ್ಟಿದ್ದ ಎಂದ ವೈದ್ಯರು ತಿಳಿಸಿದ್ದಾರೆ. ಇದರಿಂದ ಕೊಲೆ ಮಾಡಿದ ಅನ್ಯಕೋಮಿನ ಅಪ್ರಾಪ್ತ ಬಾಲಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಬೆಳೆದು ನಿಂತ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ.
ಕೊಲೆ ಮಾಡಿದ ಅಪ್ರಾಪ್ತರು ಕೂಡ ಸಾಂಕೇತ್ ಜೊತೆ ಓದಿದವರು. ಆದರೆ ಎಸ್ಎಸ್ಎಲ್ಸಿ ಡ್ರಾಪ್ ಔಟ್ ಮಾಡಿದ್ದರು. ಕಳೆದ ರಾತ್ರಿ ಸ್ಪೆಷಲ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಬರುತ್ತಿರುವಾಗ ಸಂಕೇತ್ ಸ್ನೇಹಿತನ ಮೇಲೆ ಈ ನಾಲ್ಕೈದು ಜನ ಯುವಕರು ಹಲ್ಲೆ ನಡೆಸಿದ್ದಾರೆ. ಇದನ್ನು ಬಿಡಿಸಲು ಹೋದ ಸಾಂಕೇತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಸಾಂಕೇತ್ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಸಂಕೇತ್ನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಬಳಿಕ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಹಲ್ಲೆ ನಡೆಸಿದ ಮೂವರು ಬಾಲಕರು ಪರಾರಿಯಾಗಲು ಪ್ರಯತ್ನಿಸಿದ್ದರು. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಘಟನೆ ಮಾಹಿತಿ ತಿಳಿದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಬಿಜೆಪಿ ಶಾಸಕ ಚನ್ನಬಸಪ್ಪ, ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಶಾಂತಿ ಕಾಪಾಡಲು ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವದಂತಿಗಳಿಗೆ ಕಿವಿಗೊಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಿದೆ.














