ಮನೆ ರಾಜ್ಯ ರಾಜ್ಯದ ವಿವಿಧೆಡೆ ಭಾರಿ ಮಳೆ: ಜಲಾಶಯಗಳ ಒಳ ಹರಿವು ಹೆಚ್ಚಳ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ವಿವಿಧೆಡೆ ಭಾರಿ ಮಳೆ: ಜಲಾಶಯಗಳ ಒಳ ಹರಿವು ಹೆಚ್ಚಳ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

0

ಬೆಂಗಳೂರು (Benagaluru): ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಲಾಶಯಗಳ ಒಳ ಹರಿವು ಹೆಚ್ಚಾಗಿದೆ. ಕಾವೇರಿ, ನೇತ್ರಾವತಿ, ಕುಮಾರಧಾರಾ, ಶಾಂಭವಿ ನದಿಗಳು ಹಾಗೂ ಅವುಗಳ ಉಪನದಿಗಳು ತುಂಬಿ ಹರಿಯುತ್ತಿವೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಅಲ್ಲಲ್ಲಿ ಮಣ್ಣು ಕುಸಿತ ಉಂಟಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌) ವಿವಿಧೆಡೆ ತೆರಳಿ ಪರಿಸ್ಥಿತಿ ಅವಲೋಕಿಸಿದೆ.

ಮಳೆ ಕಾರಣ ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಅಂಗನವಾಡಿ, ಶಾಲಾ– ಕಾಲೇಜುಗಳಿಗೆ ಮಂಗಳವಾರ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲ್ಲೂಕಿನ ಅನಮೋಡದ ಸಮೀ‍ಪ ಗೋವಾ ಭಾಗದ ರಾಷ್ಟ್ರೀಯ ಹೆದ್ದಾರಿ ‘4 ಎ‌’ ಮೇಲೆ ಗುಡ್ಡ ಕುಸಿದಿದೆ. ಭಾನುವಾರ ರಾತ್ರಿ 11.30ರ ಸುಮಾರಿಗೆ ದೂಧ್‌ ಸಾಗರ ದೇವಸ್ಥಾನ ಬಳಿ ಅವಘಡವಾಗಿದ್ದು, ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಉತ್ತರ ಕನ್ನಡ: ಭಾರಿ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಉತ್ತರ ಕನ್ನಡದಾದ್ಯಂತ ಸೋಮವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿದೆ. ಮಂಗಳವಾರ ಬೆಳಿಗ್ಗೆಯೂ ದಟ್ಟವಾಗಿ ಮೋಡ ಕವಿದಿದ್ದು, ವರ್ಷಧಾರೆ ಮುಂದುವರಿದಿದೆ. ಹಲವು ನದಿಗಳು ಹಾಗೂ ಹಳ್ಳಗಳು ಭರ್ತಿಯಾಗಿ ಹರಿಯುತ್ತಿವೆ.

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಇಡೀ ಧಾರಾಕಾರ ಮಳೆಯಾಗಿದ್ದು, ಮಂಗಳವಾರವೂ ಮಳೆ ಮುಂದುವರಿದಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ರಜೆ ಘೋಷಣೆ ಮಾಡಿದ್ದಾರೆ.

ಉಡುಪಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿರುವ ಕಾರಣ ಎಲ್ಲ ಶಾಲಾ ಕಾಲೇಜುಗಳಿಗೆ, ಅಂಗನವಾಡಿಗಳಿಗೆ ಮಂಗಳವಾರ ರಜೆ ನೀಡಲಾಗಿದೆ. ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಎಡೆಬಿಡದೆ ಮಳೆ ಸುರಿದ ಪರಿಣಾಮ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಹೊಸಪೇಟೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಸುಪ್ರಿತಾ ಶಾಲೆ ಮುಗಿಸಿ ಸಂಜೆ ಮನೆಗೆ ಹೋಗುವಾಗ ಕಂಬಿಹಳ್ಳಿ ಸಮೀಪ ಕಾಫಿ ಎಸ್ಟೇಟ್‌ನೊಳಗಿನ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಹಲ್ಲೂರು ಗ್ರಾಮದಲ್ಲಿ ಮಳೆಯಿಂದಾಗಿ, ಗದ್ದೆಯಲ್ಲಿ ತುಂಬಿದ್ದ ನೀರನ್ನು ಹೊರಕ್ಕೆ ಹರಿಸಲು ಹೋಗಿದ್ದ ಕೃಷಿಕ ಮಹಿಳೆ ಲಕ್ಷ್ಮಿ ಪೂಜಾರ್ತಿ (66) ಎಂಬುವರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲ್ಲೂಕಿನ ಅನಮೋಡದ ಸಮೀ‍ಪ ಗೋವಾ ಭಾಗದ ರಾಷ್ಟ್ರೀಯ ಹೆದ್ದಾರಿ ‘4 ಎ‌’ ಮೇಲೆ ಗುಡ್ಡ ಕುಸಿದಿದೆ. ಭಾನುವಾರ ರಾತ್ರಿ 11.30ರ ಸುಮಾರಿಗೆ ದೂಧ್‌ ಸಾಗರ ದೇವಸ್ಥಾನ ಬಳಿ ಅವಘಡವಾಗಿದ್ದು, ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.