ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಸಂಬಂಧ ತಮ್ಮ ವಿರುದ್ಧದ ವಿಚಾರಣೆಯನ್ನು ಕಾನೂನು ರೀತಿ ಮುಂದುವರೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ಕೊಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಹೆಚ್.ಡಿ. ರೇವಣ್ಣ ಅವರು ಪ್ರಕರಣ ರದ್ದು ಕೋರಿ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು ಜಿಲ್ಲೆಯ ಕೆ.ಆರ್. ಪೇಟೆ ಪೋಲೀಸ್ ಠಾಣೆಗೆ ಸಂತ್ರಸ್ತೆಯ ಪುತ್ರ ನೀಡಿದ್ದ ದೂರಿನ ಅನ್ವಯ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ತಮ್ಮ ವಿರುದ್ಧವಾಗಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯನ್ನು ರದ್ದು ಕೋರಿ ಹೆಚ್.ಡಿ. ರೇವಣ್ಣ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ . ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ನ್ಯಾಯಪೀಠ ಕಾನೂನು ರೀತಿಯಲ್ಲಿ ವಿಚಾರಣೆ ಮುಂದುವರೆಸುವಂತೆ ಆದೇಶ ನೀಡಿದ್ದು. ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ವೇಳೆ ರೇವಣ್ಣ ಪರ ವಕೀಲರು, ವಾದ ಮಂಡನೆಗೆ ಸಮಯಾವಕಾಶ ನೀಡಬೇಕು ಎಂದು ಕೇಳಿ ಕೊಂಡಿದ್ದರು ಎನ್ನಲಾಗಿದೆ.
ಇದಕ್ಕೆ ಆಕ್ಷೇಪಿಸಿದ್ದ ಸರ್ಕಾರಿ ಅಭಿಯೋಜಕರು, ಪ್ರಕರಣದಲ್ಲಿ ದೋಷಾರೋಪ ಹೊರಿಸುವ ಪ್ರಕ್ರಿಯೆಗೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ಹೈಕೋರ್ಟ್ 2026ರ ಫೆಬ್ರುವರಿ 5ರಂದು ಆದೇಶ ನೀಡಿತ್ತು . ಆದ್ದರಿಂದ ಈಗಾಗಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ಪ್ರಾರಂಭ ಮಾಡಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು ಎನ್ನಲಾಗಿದೆ.
ಹೀಗಾಗಿ ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ದೋಷಾರೋಪ ನಿಗದಿ ಪ್ರಕ್ರಿಯೆ ನಡೆಸುವುದಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ, ಕಾನೂನು ಪ್ರಕಾರ ವಿಚಾರಣೆ ಮುಂದುವರೆಸ ಬಹುದಾಗಿದೆ ಎಂದು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ಅರ್ಜಿಯನ್ನು ಹಿಂಪಡೆದಿದ್ದಾರೆ ಎಂಬ ಮಾಹಿತಿ ಕೇಳಿ ಬಂದಿದೆ .














