ಮನೆ ರಾಜ್ಯ ರಾಜ್ಯದ ಹಲವೆಡೆ ಭಾರಿ ಮಳೆ: ಕರಾವಳಿಯಲ್ಲಿ ʻರೆಡ್‌ ಅಲರ್ಟ್‌ʼ ಘೋಷಣೆ

ರಾಜ್ಯದ ಹಲವೆಡೆ ಭಾರಿ ಮಳೆ: ಕರಾವಳಿಯಲ್ಲಿ ʻರೆಡ್‌ ಅಲರ್ಟ್‌ʼ ಘೋಷಣೆ

0

ಬೆಂಗಳೂರು (Bengaluru): ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರವೂ ಭಾರಿ ಮಳೆಯಾಗಿದೆ. ಇಂದು (ಜುಲೈ 7) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 8ರಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಇನ್ನು ಚಿಕ್ಕಮಗಳೂರಿನಲ್ಲಿ ಜುಲೈ 8 ರಿಂದ 10 ರವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕೊಡಗು ಜಿಲ್ಲೆಯಲ್ಲಿ ಸತತ 5ನೇ ದಿನವೂ ಧಾರಾಕಾರ‌ ಮಳೆ‌‌ ಸುರಿದಿದೆ. ಮತ್ತೆ ಭಾರಿ ಮಳೆಯ ಮುನ್ಸೂಚನೆಯಿದ್ದು, ಗುರುವಾರ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೊಡಗು ಜಿಲ್ಲೆ ಸೇರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆಆರ್‌ಎಸ್‌ ಜಲಾಶಯದ ಒಳಹರಿವು 30 ಸಾವಿರ ಕ್ಯುಸೆಕ್‌ ದಾಟಿದೆ. ಬುಧವಾರ ಸಂಜೆ ವೇಳೆಗೆ ಜಲಾಶಯದ ನೀರಿನ ಮಟ್ಟ 115.70 ಅಡಿಗೆ ತಲುಪಿದೆ. ಹಾರಂಗಿ ಜಲಾಶಯಕ್ಕೆ 12,644 ಕ್ಯುಸೆಕ್‌ ನೀರು ಹರಿದುಬರುತ್ತಿದ್ದು, 11,940 ಕ್ಯುಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ.

ಹುಬ್ಬಳ್ಳಿ, ಧಾರವಾಡ, ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ದೂಧಗಂಗಾ ಹಾಗೂ ವೇದಗಂಗಾ ಉಪನದಿಗಳು ಮೈದುಂಬಿ ಹರಿಯುತ್ತಿವೆ. ಹಾಸನ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ–ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ. ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.