ಬೆಂಗಳೂರು (ಮೇ 13): ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಷ್ಟು ದಿನ ತಂಪಾಗಿದ್ದ ಕರಾವಳಿಯಲ್ಲಿ ಈಗ ಮತ್ತೊಮ್ಮೆ ಹೀಟ್ವೇವ್ ಆತಂಕ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ ಎನ್ನಲಾಗುತ್ತಿದೆ.
ಕರಾವಳಿಯಲ್ಲಿ ಇಂದು ಹೀಟ್ ವೇವ್ ಅಲರ್ಟ್ ನೀಡಲಾಗಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಹಾಗೂ ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ ಎನ್ನಲಾಗಿದೆ.
















