ಮೈಸೂರು: ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ನಡುವಿನ ಭೀಕರ ಕಾಳಗದ ಬೆನ್ನಲ್ಲೇ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ದಸರಾ ಮಹೋತ್ಸವಕ್ಕೆ ಕಂಜನ್ ಆನೆಯನ್ನು ಬಳಸದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ.ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವಿನ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಅನಿರೀಕ್ಷಿತ ಮತ್ತು ಊಹಿಸಲೂ ಆಗದ ದುರ್ಘಟನೆಯಲ್ಲಿ ಒಬ್ಬ ಪ್ರವಾಸಿ ಮಹಿಳೆ ಮತ್ತು ಒಂದು ಆನೆ ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ ಎಂದು ಸಚಿವರು ಸಂತಾಪ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.
ಹಾಸನ ಜಿಲ್ಲೆಯ ಆಲೂರಿನಲ್ಲಿ 2023ರಲ್ಲಿ ಸೆರೆ ಹಿಡಿಯಲಾಗಿದ್ದ 53 ವರ್ಷದ ಮಾರ್ತಾಂಡ 4,500 ಕೆ.ಜಿ. ತೂಕವಿತ್ತು. ಯಸಳೂರಿನ ಬಳಿ 2014ರಲ್ಲಿ ಸೆರೆ ಹಿಡಿಯಲಾಗಿದ್ದ 26 ವರ್ಷದ ಕಂಜನ್ 3 ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. ಇನ್ನು ಮುಂದೆ ದಸರಾ ಮಹೋತ್ಸವಕ್ಕೆ ಈ ಆನೆಯನ್ನು ಬಳಸದಂತೆ ಸೂಚಿಸಿರುವುದಾಗಿಯೂ ಸಚಿವ ಖಂಡ್ರೆ ತಿಳಿಸಿದ್ದಾರೆ. ಮತ್ತು ಸಾಕಾನೆಗಳ ನಡುವಿನ ಕಾದಾಟದ ವೇಳೆ ಆನೆಯ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆಯ ಬೆನ್ನಲ್ಲೇ ಸಚಿವರು, ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ ರೂಪಿಸುವಂತೆ ಆದೇಶಿಸಿದ್ದಾರೆ. ಪ್ರವಾಸಿಗರ ಸುರಕ್ಷತೆಗಾಗಿ ಎಸ್ಓಪಿ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಖಂಡ್ರೆ, ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯತೆಯನ್ನು ಪ್ರತಿಪಾದಿಸಿದ್ದಾರೆ.
ಪರಿಸರ ಪ್ರವಾಸೋದ್ಯಮದ ಚಾರಣಪಥಗಳಲ್ಲಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರಮಾಣಿತ ಕಾರ್ಯಾಚರಣೆ ವಿಧಾನ ರೂಪಿಸಲಾಗಿದ್ದು, ಈ ಎಸ್ಓಪಿ ಜಾರಿ ಖಚಿತಪಡಿಸಿಕೊಳ್ಳುವವರೆಗೆ ಚಾರಣಪಥಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಈಗಾಗಲೇ ಸೂಚಿಸಲಾಗಿದೆ. ಅದೇ ಪ್ರಕಾರವಾಗಿ ಸಾಕಾನೆ ಶಿಬಿರಗಳಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಎಸ್ಓಪಿ ರೂಪಿಸಲು ನಿರ್ದೇಶನ ನೀಡಿದ್ದಾರೆ ಎನ್ನಲಾಗುತ್ತಿದೆ.

















