ಬೆಂಗಳೂರು : ರಾಜಧಾನಿಯಲ್ಲಿ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, 14 ವಿಮಾನಗಳ ಹಾರಾಟ ವಿಳಂಬವಾಗಿದೆ.
ಗುರುವಾರ (ಮೇ 21) ಸಂಜೆ ಸುರಿದ ಭಾರಿ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಎರಡು ವಿಮಾನಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, 14 ವಿಮಾನಗಳ ಹಾರಾಟ ತಡವಾಗಿದೆ.
ವಿಮಾನ ನಿಲ್ದಾಣದ ಅಧಿಕಾರಿಗಳ ಮಾಹಿತಿ ಪ್ರಕಾರ, ಕಳಪೆ ಗೋಚರತೆಯಿಂದಾಗಿ ಸಂಜೆ 6:20ಕ್ಕೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನವನ್ನು ಚೆನ್ನೈಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಜೊತೆಗೆ ಬರೇಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಮತ್ತೊಂದು ಇಂಡಿಗೋ ವಿಮಾನವನ್ನು 6:19ಕ್ಕೆ ಕೊಯಮತ್ತೂರಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹವಾಮಾನ ವೈಪರೀತ್ಯದಿಂದಾಗಿ ಬರಬೇಕಾಗಿದ್ದ ವಿಮಾನಗಳು ತಡವಾಗಿ ಬಂದ ಹಿನ್ನೆಲೆ, ಬೆಂಗಳೂರಿನಿಂದ ಹೊರಡಬೇಕಾಗಿದ್ದ 14 ವಿಮಾನಗಳ ಸಂಚಾರ ವಿಳಂಬವಾಗಿದೆ ಎಂದು ಮಾಹಿತಿ ನೀಡಿದ್ದಾರೆ.


















