ಮನೆ ರಾಜ್ಯ ರಾಜ್ಯದಲ್ಲಿ ಮುಂದಿನ 4 ದಿನ ಮಳೆ – 8 ಜಿಲ್ಲೆಗಳಿಗೆ ಆರೆಂಜ್‌, 19 ಜಿಲ್ಲೆಗಳಿಗೆ ಯೆಲ್ಲೋ...

ರಾಜ್ಯದಲ್ಲಿ ಮುಂದಿನ 4 ದಿನ ಮಳೆ – 8 ಜಿಲ್ಲೆಗಳಿಗೆ ಆರೆಂಜ್‌, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

0

ಬಿಸಿಲಿನಿಂದ ಬಾಡಿ ಬಸವಳಿದಿದ್ದ ರಾಜ್ಯದ ಜನಕ್ಕೆ ಪೂರ್ವ ಮುಂಗಾರು ಮಳೆ ತಂಪೆರೆದಿದೆ. ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲೂ ಇಂದು ಜೋರು ಮಳೆಯಾಗುವ ಮುನ್ಸೂಚನೆ ನೀಡಿದ್ದು, ನಗರಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ಮುಂದಿನ ಮೂರು ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಭಾಗದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲೂ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.