ಕಲಬುರಗಿ: ಜಿಲ್ಲೆಯ ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಸಮೀಪ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಯಾದಗಿರಿಯ ಆಸ್ಪತ್ರೆಯಿಂದ ಹಿಂದಿರುಗುತ್ತಿದ್ದ ವೇಳೆ ಈ ದಾರುಣ ಘಟನೆ ನಡೆದಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಾದ ಐವರು ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದವರಾಗಿದ್ದು, ಎಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಮೃತರನ್ನು ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಎಂದು ಗುರುತಿಸಲಾಗಿದೆ.
ಲಾಡ್ಲಾಪೂರ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಪಘಾತ ನಡೆದ ತಕ್ಷಣ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ವಾಡಿ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಕಲಬುರಗಿ ಎಸ್ಪಿ ಎ. ಶ್ರೀನಿವಾಸುಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.


















