ಸಹರಾನ್ಪುರ : ಸಹರಾನ್ಪುರ ಜಿಲ್ಲೆಯ ಗ್ರಾಮವೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ದೇವಾಲಯದ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಹತ್ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಪ್ರಕಾರ, ಅವರ ಮಗಳು ದೇವಾಲಯದ ಒಳಗೆ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ, ಅಲ್ಲಿನ ಅರ್ಚಕನು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಹೃದಯ ನಾರಾಯಣ್ ಸಿಂಗ್ ತಿಳಿಸಿದ್ದಾರೆ.
ಬಾಲಕಿಯ ಕೂಗು ಕೇಳಿ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಆಕೆಯನ್ನು ರಕ್ಷಿಸಿದ್ದಾರೆ. ನಂತರ ಆರೋಪಿಯಾಗಿದ್ದ 48 ವರ್ಷದ ದೇವಾಲಯದ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಸಂತ್ರಸ್ತೆ ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಕ್ಕೆ ಸೇರಿದವಳಾಗಿರುವ ಹಿನ್ನೆಲೆಯಲ್ಲಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಕಾರ್ಯಕರ್ತರು ಪೊಲೀಸ್ ಠಾಣೆ ಹೊರಗೆ ಪ್ರತಿಭಟನೆ ನಡೆಸಿದ್ದಾರೆ ಎಂದು ಎಸ್ಎಚ್ಒ ಹೇಳಿದ್ದಾರೆ.
ಇದೇ ವೇಳೆ ಕೆಲವು ಹಿಂದೂ ಸಂಘಟನೆಗಳ ಸದಸ್ಯರು ಕೂಡ ಸ್ಥಳಕ್ಕೆ ಆಗಮಿಸಿದ್ದು, ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಗ್ರಾಮದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


















