ಮನೆ ರಾಜ್ಯ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಪ್ರಕರಣ; ಗುತ್ತಿಗೆದಾರ ಕಂಪನಿ ವಿರುದ್ಧ FIR

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಪ್ರಕರಣ; ಗುತ್ತಿಗೆದಾರ ಕಂಪನಿ ವಿರುದ್ಧ FIR

0

ಬೆಂಗಳೂರು : ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು 7 ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಕಂಪನಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಗ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ. ಚೆನ್ನೈ ಮೂಲದ ಎಎಸ್‌ಆರ್ ಟ್ರೇಡರ್ಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣದ ತನಿಖೆಗೆ ತಾಂತ್ರಿಕ ಸಮಿತಿ ರಚನೆ ಮಾಡಲಾಗಿತ್ತು. ಬೌರಿಂಗ್ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣಕ್ಕಾಗಿ ಹಳೆ ಕಟ್ಟಡ ತೆರವುಗೊಳಿಸಲು ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ವಹಿಸಲಾದ ಎಎಸ್‌ಆರ್ ಟ್ರೇಡರ್ಸ್ ಕಂಪನಿ ನಿರ್ಲಕ್ಷ್ಯ ವಹಿಸಿದ್ದು, ಕಟ್ಟಡ ನೆಲಸಮ ಮಾಡಿದ ತ್ಯಾಜ್ಯ ವಿಲೇವರಿ ಮಾಡದೆ ಅಲ್ಲಿ ಬಿಟ್ಟು ಹೋಗಿದ್ದು ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.

ತ್ಯಾಜ್ಯ ತೆರವುಗೊಳಿಸದ ಹಾಗೂ ನಿಯಮ ಉಲ್ಲಂಘಿಸಿದ ಕುರಿತು ಸ್ಪಷ್ಟೀಕರಣ ನೀಡುವಂತೆ ಸರ್ಕಾರದ ವತಿಯಿಂದ ಎಎಸ್‌ಆರ್ ಟ್ರೇಡರ್ಸ್ ಕಂಪನಿಯ ಇಮೇಲ್ ಐಡಿಗೆ ನೋಟಿಸ್ ಕಳುಹಿಸಲಾಗಿತ್ತು. ಮೇ 18ರ ಒಳಗಾಗಿ ಲಿಖಿತ ಸ್ಪಷ್ಟೀಕರಣ ನೀಡಬೇಕೆಂದು ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರು ಗಡುವು ನೀಡಿದ್ದರೂ ಗುತ್ತಿಗೆದಾರ ಕಂಪನಿ ಇಮೇಲ್‌ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ನಿರ್ದೇಶನ ಮೇರೆಗೆ ದೂರು ದಾಖಲಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಕಂಪನಿಗೆ ನೋಟಿಸ್ ನೀಡಿದ್ದಾರೆ.