ನಂಜನಗೂಡು: ಮೈಸೂರಿನ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನಾಪತ್ತೆಯಾಗಿದ್ದ ವೃದ್ಧೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಪ್ರಕರಣದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯ ಹೊರಬಿದ್ದಿದೆ. ಚಿರತೆ ದಾಳಿ ಎಂದು ಬಿಂಬಿಸಲು ಯತ್ನಿಸಿದ್ದ ವ್ಯಕ್ತಿಯೇ ವೃದ್ಧೆಯನ್ನು ಕೊಲೆ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.
63 ವರ್ಷದ ಶಿವರುದ್ರಮ್ಮ ಅವರು ಗ್ರಾಮದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಪೂಜೆಗಾಗಿ ಬಿಲ್ವಪತ್ರೆ ಸಂಗ್ರಹಿಸಲು ತೆರಳಿದ್ದರು. ಈ ವೇಳೆ ಸುಮಾರು 70 ಗ್ರಾಂ ಚಿನ್ನಾಭರಣ ಧರಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಮಹದೇವಪ್ಪ ಎಂಬಾತ ಶಿವರುದ್ರಮ್ಮ ಅವರಿಗೆ ಬಿಲ್ವಪತ್ರೆ ಸಂಗ್ರಹಿಸಲು ಸಹಾಯ ಮಾಡುವ ನೆಪದಲ್ಲಿ ಹತ್ತಿರದ ಜಮೀನಿಗೆ ಕರೆದೊಯ್ದಿದ್ದಾನೆ. ಬಳಿಕ ಆಕೆಯನ್ನು ಕೊಲೆ ಮಾಡಿ, ಚಿನ್ನಾಭರಣಗಳನ್ನು ಕಸಿದು ಮೃತದೇಹವನ್ನು ಜಮೀನಿನಲ್ಲಿದ್ದ ಇಂಗು ಗುಂಡಿಗೆ ಎಸೆದಿದ್ದಾನೆ ಎನ್ನಲಾಗಿದೆ.
ಶಿವರುದ್ರಮ್ಮ ಮನೆಗೆ ಮರಳದ ಹಿನ್ನೆಲೆಯಲ್ಲಿ ಅವರ ಪತಿ ಗುರುಸ್ವಾಮಪ್ಪ ಅವರು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಬಳಿಕ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು.
ತನಿಖೆ ವೇಳೆ ಆರೋಪಿ ಮಹದೇವಪ್ಪ ಕೂಡ ಶೋಧ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದನು. ಇದೇ ವೇಳೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ, ವೃದ್ಧೆ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂದು ಆತ ಪದೇ ಪದೇ ಹೇಳುತ್ತಿದ್ದ ಎನ್ನಲಾಗಿದೆ.
ಆರೋಪಿ ನಿರಂತರವಾಗಿ ಚಿರತೆ ದಾಳಿಯ ವಿಚಾರವನ್ನು ಪ್ರಸ್ತಾಪಿಸುತ್ತಿದ್ದ ಹಿನ್ನೆಲೆ ಪೊಲೀಸರಿಗೆ ಅನುಮಾನ ಮೂಡಿದ್ದು, ವಿಚಾರಣೆಗಾಗಿ ವಶಕ್ಕೆ ಪಡೆದು ತನಿಖೆ ನಡೆಸಲಾಗಿದೆ.
ವಿಚಾರಣೆ ವೇಳೆ ಮಹದೇವಪ್ಪ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಹಣಕಾಸಿನ ಸಂಕಷ್ಟದಿಂದಾಗಿ ಚಿನ್ನಾಭರಣ ಕದಿಯುವ ಉದ್ದೇಶದಿಂದ ಶಿವರುದ್ರಮ್ಮ ಅವರನ್ನು ಕೊಲೆ ಮಾಡಿದ್ದಾಗಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯಿಂದ ಸುಮಾರು 53 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.


















