ಬೆಂಗಳೂರು, ಜೂನ್ 5: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಮೊದಲ ರಾಜೀನಾಮೆ ಘೋಷಣೆಯಾಗಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಹಿನ್ನೆಲೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ, ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಬೆಂಗಳೂರಿನ ಕೋರಮಂಗಲದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ತಮ್ಮ ನಿರ್ಧಾರದ ಹಿಂದಿನ ಕಾರಣಗಳನ್ನು ವಿವರಿಸಿದರು. “ನನಗೆ ಜಲಸಂಪನ್ಮೂಲ ಇಲಾಖೆ ನೀಡಲಾಗಿದೆ ಎಂಬ ಕಾರಣಕ್ಕಷ್ಟೇ ಈ ನಿರ್ಧಾರ ಕೈಗೊಂಡಿಲ್ಲ. ಈ ಹಿಂದೆ ಈಗಿನ ಮುಖ್ಯಮಂತ್ರಿಗಳು ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಆ ಮಾತು ಈಡೇರಿಲ್ಲ. ಈ ಸತ್ಯವನ್ನು ಜನರಿಗೆ ತಿಳಿಸಬೇಕಿದೆ” ಎಂದು ಹೇಳಿದರು.

ಯಾರ ಮೇಲೂ ಅಸಮಾಧಾನ ಇಲ್ಲ, ಕಾಂಗ್ರೆಸ್‌ನಲ್ಲೇ ಮುಂದುವರಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಥವಾ ಹಿರಿಯ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ವೈಯಕ್ತಿಕ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ ರಾಮಲಿಂಗಾ ರೆಡ್ಡಿ, ತಾವು ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷವನ್ನು ತೊರೆದಿಲ್ಲ ಎಂದು ಹೇಳಿದರು.
“ಕಳೆದ 53 ವರ್ಷಗಳಿಂದ ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷ ನನಗೆ ಅನೇಕ ಅವಕಾಶಗಳನ್ನು ನೀಡಿದೆ. ನನ್ನ ಜೀವನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಂದಿಗೂ ರಾಜೀನಾಮೆ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ” ಎಂದು ಅವರು ತಿಳಿಸಿದರು.
‘ಬೆಂಗಳೂರು ಅಭಿವೃದ್ಧಿ ಖಾತೆ ನೀಡುವುದಾಗಿ ಮಾತು ಕೊಟ್ಟಿದ್ದರು’
ತಮ್ಮ ರಾಜಕೀಯ ಪಯಣವನ್ನು ನೆನಪಿಸಿಕೊಂಡ ರೆಡ್ಡಿ, ತಾವು ಸತತ ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ವೀರಪ್ಪ ಮೊಯ್ಲಿ ಹಾಗೂ ಸಿದ್ದರಾಮಯ್ಯ ಅವರ ಸಂಪುಟಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದೇನೆ ಎಂದರು.

“ನಾನು ಯಾವುದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಬಳಿ ಹೋಗಿ ಸಚಿವ ಸ್ಥಾನ ಅಥವಾ ನಿರ್ದಿಷ್ಟ ಖಾತೆ ಕೇಳಿಲ್ಲ. ಈ ಬಾರಿಯೂ ಮಂತ್ರಿ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಅಥವಾ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿರಲಿಲ್ಲ. ಆದರೆ, ಹಿಂದೆ ಡಿಕೆ ಶಿವಕುಮಾರ್ ಅವರು ತಾವು ಮುಖ್ಯಮಂತ್ರಿಯಾದ ನಂತರ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನನಗೆ ನೀಡುವುದಾಗಿ ಭರವಸೆ ನೀಡಿದ್ದರು. ಈಗ ಆ ಬದಲಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿದೆ” ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಮಲಿಂಗಾ ರೆಡ್ಡಿ ಅವರ ಈ ನಿರ್ಧಾರ ಕಾಂಗ್ರೆಸ್ ಸರ್ಕಾರದ ಒಳಗಿನ ಅಸಮಾಧಾನವನ್ನು ಬಹಿರಂಗಪಡಿಸಿದಂತಾಗಿದೆ. ಇದೇ ವೇಳೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜ್ಯ ಭೇಟಿ ಸನ್ನಿಹಿತವಾಗಿರುವ ಸಂದರ್ಭದಲ್ಲೇ ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
















