ಮನೆ ಸುದ್ದಿ ಜಾಲ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ಐ ಮತ್ತು ಮಹಿಳಾ ಕಾನ್ಸ್ಟೇಬಲ್

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ಐ ಮತ್ತು ಮಹಿಳಾ ಕಾನ್ಸ್ಟೇಬಲ್

0

ಕಲಬುರಗಿ, ಜೂನ್ 8: ಕಲಬುರಗಿಯಲ್ಲಿ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪೋಕ್ಸೋ ಪ್ರಕರಣದ ಸಂತ್ರಸ್ತೆಯ ತಾಯಿಯಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಎಎಸ್ಐ ಹಾಗೂ ಮಹಿಳಾ ಕಾನ್ಸ್ಟೇಬಲ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಪೋಕ್ಸೋ ಪ್ರಕರಣದ ಸಂತ್ರಸ್ತೆಯ ತಾಯಿಗೆ ನ್ಯಾಯಾಲಯದಲ್ಲಿ ಕಾನೂನು ನೆರವು ಹಾಗೂ ಅಗತ್ಯ ಸಹಕಾರ ನೀಡುವ ನೆಪದಲ್ಲಿ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಇದಲ್ಲದೆ, ಸರ್ಕಾರಿ ಅಭಿಯೋಜಕರ ಶುಲ್ಕ ಎಂದು ಹೇಳಿ ಈ ಹಿಂದೆ ಸಂತ್ರಸ್ತೆಯ ತಾಯಿಯಿಂದ 1,000 ರೂಪಾಯಿ ಹಣವನ್ನೂ ಪಡೆದುಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ. ನಿರಂತರ ಕಿರುಕುಳದಿಂದ ಬೇಸತ್ತ ಮಹಿಳೆ ಕಲಬುರಗಿ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು.

ಲಂಚ ಸ್ವೀಕರಿಸುತ್ತಿದ್ದಾಗಲೇ ದಾಳಿ

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಇನ್ಸ್‌ಪೆಕ್ಟರ್ ಅರುಣ್‌ಕುಮಾರ್ ಮುರಗುಂಡಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು. ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಸಮೀಪ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮಹಿಳಾ ಕಾನ್ಸ್ಟೇಬಲ್ ಜ್ಯೋತಿ ಸಂತ್ರಸ್ತೆಯ ತಾಯಿಯಿಂದ 10 ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ, ಲೋಕಾಯುಕ್ತ ದಾಳಿಯ ಮಾಹಿತಿ ತಿಳಿಯುತ್ತಿದ್ದಂತೆಯೇ ಎಎಸ್ಐ ಶಿವಶರಣಪ್ಪ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಆದರೆ ಎಚ್ಚೆತ್ತ ಲೋಕಾಯುಕ್ತ ಅಧಿಕಾರಿಗಳು ಆತನನ್ನು ಬೆನ್ನಟ್ಟಿ ಆಳಂದ ತಾಲೂಕಿನ ಕಡಗಂಚಿ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೊಕದ್ದಮೆ ದಾಖಲು

ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಬಂಧಿತ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.