ಮನೆ ಸುದ್ದಿ ಜಾಲ ರೌಡಿಶೀಟರ್ ಬರ್ಬರ ಹತ್ಯೆ: ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ರೌಡಿಶೀಟರ್ ಬರ್ಬರ ಹತ್ಯೆ: ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

0

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಜನತಾ ಕಾಲೋನಿಯಲ್ಲಿ ರೌಡಿಶೀಟರ್‌ವೊಬ್ಬರನ್ನು ದುಷ್ಕರ್ಮಿಗಳು ಬೆನ್ನಟ್ಟಿಕೊಂಡು ಹೋಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮೃತನನ್ನು ಖಲೀಮುಲ್ಲಾ ಖಾನ್ (36) ಎಂದು ಗುರುತಿಸಲಾಗಿದ್ದು, ಆತ ಸೂಲಿಬೆಲೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಅಲ್ಲದೆ, ಹಣ್ಣಿನ ವ್ಯಾಪಾರ ನಡೆಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶನಿವಾರ ರಾತ್ರಿ ಸುಮಾರು 11.30ರ ವೇಳೆಗೆ ಈ ಘಟನೆ ನಡೆದಿದ್ದು, ಊಟ ಮುಗಿಸಿ ಮನೆಯಿಂದ ಹೊರಬಂದಿದ್ದ ಖಲೀಮುಲ್ಲಾ ಖಾನ್ ಮೇಲೆ ಮನೆ ಸಮೀಪವೇ ಹೊಂಚುಹಾಕಿ ಕಾದಿದ್ದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಆರೋಪಿಗಳು ಖಾನ್ ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದಾಗ, ಅವರು ಪ್ರಾಣ ಉಳಿಸಿಕೊಳ್ಳಲು ಓಡಲು ಯತ್ನಿಸಿದ್ದಾರೆ. ಆದರೆ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿಕೊಂಡು ಹೋಗಿ ನಿರಂತರವಾಗಿ ಹಲ್ಲೆ ನಡೆಸಿದ್ದಾರೆ. ದಾಳಿಯಲ್ಲಿ ಖಲೀಮುಲ್ಲಾ ಖಾನ್ ಅವರ ದೇಹದ ಮೇಲೆ 20ಕ್ಕೂ ಹೆಚ್ಚು ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆ ನಡೆಸಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಹಳೆಯ ವೈಷಮ್ಯವೇ ಈ ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಮೂವರಿಂದ ಐವರವರೆಗೆ ಆರೋಪಿಗಳು ಈ ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಆರೋಪಿಗಳ ಗುರುತು ಪತ್ತೆಯಾಗಿದ್ದು, ಅವರನ್ನು ಬಂಧಿಸಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಶೋಧ ಕಾರ್ಯ ಮುಂದುವರಿಸಲಾಗಿದೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ಆರೋಪಿಗಳ ಬಂಧನದ ಬಳಿಕ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.