ಮನೆ ಸುದ್ದಿ ಜಾಲ ಮೈಸೂರಲ್ಲಿ ಘೋರ ದುರಂತ: ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ!...

ಮೈಸೂರಲ್ಲಿ ಘೋರ ದುರಂತ: ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ! ಕೊಲೆ ಆರೋಪ ಮಾಡಿದ ಪೋಷಕರು!

0

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಆದರೆ, ಇದು ಆತ್ಮಹತ್ಯೆಯಲ್ಲ, ಪತಿಯೇ ಕೊಲೆ ಮಾಡಿ ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ್ದಾನೆ ಎಂದು ಮೃತೆಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ಮೃತ ಮಹಿಳೆಯನ್ನು ಸಂಧ್ಯಾ (30) ಎಂದು ಗುರುತಿಸಲಾಗಿದ್ದು, ಅವರು ಹುಣಸೂರು ಪುರಸಭೆಯ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿಯಾಗಿದ್ದಾರೆ. ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಜವರೇಗೌಡ ಪಾರ್ಕ್ ಸಮೀಪದ ನಿವಾಸದಲ್ಲಿ ಈ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಕೆಲ ವರ್ಷಗಳ ಹಿಂದೆ ಸಂಧ್ಯಾ ಅವರನ್ನು ಟೀಕೆ ಲೇಔಟ್ ನಿವಾಸಿ ಮಹದೇವ್ ಅವರ ಪುತ್ರ ಅಕ್ಷಯ್ ಅವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಆದರೆ, ಮದುವೆಯಾದ ಬಳಿಕ ದಾಂಪತ್ಯ ಜೀವನದಲ್ಲಿ ಮನಸ್ತಾಪಗಳು ಉಂಟಾಗಿದ್ದು, ಪತಿ-ಪತ್ನಿ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು ಎನ್ನಲಾಗಿದೆ.

ಶನಿವಾರ ಸಂಧ್ಯಾ ಅವರ ಮೃತದೇಹ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ, ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಮೃತೆಯ ಪೋಷಕರು, “ನಮ್ಮ ಮಗಳನ್ನು ಪತಿ ಹಾಗೂ ಆತನ ಕುಟುಂಬದವರು ಕೊಲೆ ಮಾಡಿ ಬಳಿಕ ಆತ್ಮಹತ್ಯೆಯಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸರಸ್ವತಿಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.