ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ 41 ವರ್ಷದ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ.
ಜೂನ್ 3ರ ಸಂಜೆ ಬಸವಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಜೂನ್ 8ರಂದು ಆರೋಪಿಗಳು ಚಿತ್ರೀಕರಿಸಿದ್ದಾರೆ ಎನ್ನಲಾದ ಮಹಿಳೆಯ ಅಮಲಿನ ಸ್ಥಿತಿಯ ವಿಡಿಯೋ ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ಹರಿದಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 10 ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಪೊಲೀಸರ ಮಾಹಿತಿಯ ಪ್ರಕಾರ, ಸಂತ್ರಸ್ತೆ ತನ್ನ ಪತಿಯೊಂದಿಗೆ ಜಗಳವಾದ ಬಳಿಕ ತವರು ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಸಹಾಯ ಮಾಡುವ ನೆಪದಲ್ಲಿ ಆಕೆಯ ಬಳಿ ಬಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆ ಇಬ್ಬರು ಮಹಿಳೆಗೆ ತಂಪು ಪಾನೀಯ ನೀಡಿದ್ದು, ಅದರಲ್ಲಿ ನಿದ್ರಾಜನಕ ಮಿಶ್ರಣ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬಳಿಕ ಮಹಿಳೆ ಪ್ರಜ್ಞೆ ಕಳೆದುಕೊಂಡಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅನಂತರ ಆಕೆಯನ್ನು ಗ್ರಾಮದ ಹೊರಭಾಗದಲ್ಲಿರುವ ಪ್ರತ್ಯೇಕ ಕೃಷಿ ಜಮೀನಿಗೆ ಕರೆದೊಯ್ಯಲಾಗಿದ್ದು, ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳು, ತಾನು ಅಮಲಿನಲ್ಲಿದ್ದ ವೇಳೆ ತನ್ನ ಛಾಯಾಚಿತ್ರಗಳು ಹಾಗೂ ವಿಡಿಯೋಗಳನ್ನು ಸಹ ಚಿತ್ರೀಕರಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ವಿಡಿಯೋಗಳು ವೈರಲ್ ಆಗಿರುವ ವಿಷಯವನ್ನು ಗ್ರಾಮಸ್ಥರಿಂದ ತಿಳಿದುಕೊಂಡ ಬಳಿಕ ಮಹಿಳೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 70 (ಸಾಮೂಹಿಕ ಅತ್ಯಾಚಾರ) ಸೇರಿದಂತೆ ವಿವಿಧ ಕಲಂಗಳ ಅಡಿಯಲ್ಲಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ವಿಧಿಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ. ತಿಳಿಸಿದ್ದಾರೆ.
“ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 10 ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ” ಎಂದು ಅವರು ಹೇಳಿದ್ದಾರೆ.















