ಮೈಸೂರು : ಮೈಸೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ(RTO 55 )ಯಲ್ಲಿ ಸ್ವಚ್ಛತೆ ಕೊರತೆ ಕಂಡುಬರುತ್ತಿದೆ. ಕಚೇರಿ ಆವರಣದ ಒಳಭಾಗದಲ್ಲಿ ಪಾರಿವಾಳಗಳ ಪಿಕ್ಕೆಗಳು ಕಂಡುಬರುತ್ತಿದ್ದು, ಸಾರ್ವಜನಿಕರು ದಿನನಿತ್ಯ ಓಡಾಡುವ ಸ್ಥಳದಲ್ಲೂ ಸಹ ಸ್ವಚ್ಛತೆ ಕಾಪಾಡದೆ ಅಧಿಕಾರಿಗಳು ನಿರ್ಲಕ್ಷೆ ತೋರಿದಂತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಇದರಿಂದ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.
ಇದೇ ವೇಳೆ, ಕಚೇರಿ ಹೊರಭಾಗದ ವಾಹನ ನಿಲುಗಡೆ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಿಡಗಂಟಿಗಳು ಬೆಳೆದಿದ್ದು, ಹಾವುಗಳು ಹಾಗೂ ಇತರೆ ವಿಷಕಾರಿ ಜೀವಿಗಳು ಅಡಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರತಿದಿನ ಇದೇ ಮಾರ್ಗದಲ್ಲಿ ಸಾರ್ವಜನಿಕರು ಓಡಾಡುತ್ತಿರುವ ಕಾರಣ ಅವರ ಸುರಕ್ಷತೆ ಬಗ್ಗೆ ಕಳವಳ ಮೂಡಿದೆ.

ಪ್ರಸ್ತುತ ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಪೊದೆಗಳ ನಡುವೆ ಕ್ರಿಮಿಕೀಟಗಳು ಮತ್ತು ಹಾವುಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದರೂ, ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಪ್ರತಿನಿತ್ಯ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಲ್ಲಿಂದಲೇ ತಮ್ಮ ಕೊಟ್ಟಡಿಗೆ ಹೋದರು ಸಹ ಇದರ ಬಗ್ಗೆ ಕ್ರಮ ಕೈಗೊಳ್ಳದೆ ಇರುವುದು ಏಕೆ ಎಂಬುದು ಯಕ್ಷಪ್ರಶ್ನೆಯಾಗಿದೆ.

ಕಚೇರಿಗೆ ಆಗಮಿಸುವ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುವ ಮುನ್ನ ಸಂಬಂಧಿತ ಅಧಿಕಾರಿಗಳು ತಕ್ಷಣ ಸ್ವಚ್ಛತಾ ಕಾರ್ಯ ಕೈಗೊಂಡು, ಗಿಡಗಂಟಿಗಳನ್ನು ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
















